ಬಿಜೆಪಿಯೊಂದಿಗೆ ಮೈತ್ರಿ; ವರಿಷ್ಠರ ತೀರ್ಮಾನಕ್ಕೆ ಬದ್ಧ: ಉಡುಪಿ ಜಿಲ್ಲಾ ಜೆಡಿಎಸ್ ನಿರ್ಣಯ

Update: 2023-09-15 14:11 GMT

ಉಡುಪಿ, ಸೆ.15:ಬದಲಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಬದ್ಧವಾಗಿರುವ ಬಗ್ಗೆ ಸರ್ವಾನುಮತದ ನಿರ್ಣಯಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಯೋಗೀಶ್ ಶೆಟ್ಟಿ, ಪಕ್ಷದ ಉಡುಪಿ ಜಿಲ್ಲಾ ಸಮಿತಿಯ ತುರ್ತುಸಭೆ ಇಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದು, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಬದ್ಧವಾಗಿರುವ ಸರ್ವಾನು ಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಕಳೆದ ರವಿವಾರ ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಹಿರಂಗ ಘೋಷಣೆ ಮಾಡಲಾಗಿತ್ತು ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಹಾಗೂ ಕೋರ್‌ಸಮಿತಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನಕ್ಕೆ ಸರ್ವಾನುಮತದ ಒಪ್ಪಿಗೆ ನೀಡಿತ್ತು ಎಂದರು.

ಇದೇ ಸೆ.26ರಿಂದ ಕೋರ್ ಸಮಿತಿಯ ಅಧ್ಯಕ್ಷ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಸಮಿತಿಯ ಸದಸ್ಯರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಪುನರ್‌ಸಂಘಟನೆ ನಡೆಸಲಿದ್ದಾರೆ ಎಂದು ಯೋಗೀಶ್ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಜೆಡಿಎಸ್‌ನ ಕಾರ್ಯಾಧ್ಯಕ್ಷ ವಾಸುದೇವ ರಾವ್, ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪದಾಧಿಕಾರಿಗಳಾದ ಇಕ್ಬಾಲ್ ಆತ್ರಾಡಿ, ಶ್ರೀಕಾಂತ್ ಪಿ., ಬಾಲಕೃಷ್ಣ ಆಚಾರ್ಯ, ವೆಂಕಟೇಶ್, ಅಶ್ರಫ್ ಮುಂತಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News