ಬೈಂದೂರು: ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
ಬೈಂದೂರು: ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ನೀಡದಿದ್ದಕ್ಕೆ ಎಸೆಸೆಲ್ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಸಾರ್ವಜನಿಕರು ಮತ್ತು ಕುಟುಂಬಸ್ಥರು ಬೈಂದೂರು ಆರಕ್ಷಕ ಠಾಣೆ ಎದುರು ಜಮಾಯಿಸಿದರು.
ನ್ಯಾಯ ದೊರಕುವ ವರೆಗೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದ ಕುಟುಂಬಸ್ಥರು, ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ತನಿಖೆ ನಡೆಸುವ ಮೂಲಕ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಪ್ರೋಬೇಷನರಿ ಐಪಿಎಸ್ ಡಾ. ಹರ್ಷ ಪ್ರಿಯಂವದಾ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್ ಸಾರ್ವಜನಿಕರ ಜೊತೆ ಮಾತನಾಡಿ, ಈಗಾಗಲೇ ವಿಚಾರದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿಯಾಗಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದ್ದು ಒಂದು ವಾರದೊಳಗೆ ತನಿಖೆ ನಡೆಸಿ ಸೂಕ್ತ ವರದಿ ನೀಡಲಾಗುವುದು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಊರಿನ ಹಿರಿಯರು, ಸಮಾಜದ ಮುಖಂಡರು, ಸ್ಥಳೀಯರು ಕುಟುಂಬದವರಿಗೆ ಧೈರ್ಯ ಹೇಳಿ, ಮನವರಿಕೆ ಮಾಡಿದ ಬಳಿಕ ವಿದ್ಯಾರ್ಥಿಯ ಮೃತದೇಹವನ್ನು ಮನೆಗೆ ತರಲಾಗಿದೆ.