ರಕ್ತದಾನದಿಂದ ಜೀವಗಳ ರಕ್ಷಣೆ ಸಾಧ್ಯ: ಟಿ.ರಂಗ ಪೈ
ಉಡುಪಿ, ಅ.31: ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ.ರಂಗ ಪೈ ಹೇಳಿದ್ದಾರೆ.
ಇಂದು ಮಣಿಪಾಲ ಎಂ.ಐ.ಟಿ ಕ್ಯಾಂಪಸ್‌ನಲ್ಲಿರುವ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಹಾಗೂ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ, ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ರಕ್ತದಾನವು ಮಾನವೀಯ ದೃಷ್ಟಿಯಿಂದ ಸ್ವಯಂ ಪ್ರೇರಿತವಾಗಿ ಮಾಡುವ ಕಾರ್ಯವಾಗಿದ್ದು, ಇದರಿಂದ ಹಲವು ಅಮೂಲ್ಯ ಜೀವಗಳನ್ನು ರಕ್ಷಿಸ ಬಹುದಾಗಿದೆ.ಶಾಲಾ-ಕಾಲೇಜುಗಳ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯವಿಲ್ಲ. ಶಿಕ್ಷಣದೊಂದಿಗೆ ಸಂಸ್ಕಾರವನ್ನು ಬೆಳೆಸಿ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವು ದರಿಂದ ಇದು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಎಂ.ಎಸ್.ಡಿ.ಸಿ ಅಧ್ಯಕ್ಷ ಹಾಗೂ ರಿಜಿಸ್ಟ್ರಾರ್ ಡಾ.ರಾಧಾಕೃಷ್ಣ ಎಸ್ ಐತಾಳ್ ಮಾತನಾಡಿ, ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಆರೋಗ್ಯ ವಂತ ಜೀವನ ಹೊಂದುವಂತೆ ಹಾಗೂ ಸಮಾಜ ಸೇವೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಆರೋಗ್ಯ ಇಲಾಖೆಯ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ಚಿಕ್ಕಂದಿನಿಂದಲೇ ರಕ್ತದಾನ ಶಿಬಿರ ಗಳಲ್ಲಿ ಭಾಗವಹಿಸಬೇಕು. ಒಂದು ಯೂನಿಟ್ ರಕ್ತದಿಂದ 4 ಜನರ ಜೀವವನ್ನು ಉಳಿಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ 6 ಮಂದಿ ದಾನಿಗಳನ್ನು ಸನ್ಮಾನಿಸಲಾುತು. ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ಎಂ.ಸಿ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ಶಮ್ಮಿ ಶಾಸ್ತ್ರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷ ಧನುಷ್ ಕೆ, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ.ಎ.ಎನ್. ಕಾಂತರಾಜ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಹಾಗೂ ಇತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೃಥ್ವಿ ಸ್ವಾಗತಿಸಿದರು. ಮಹಾಬಲೇಶ್ ಕಾರ್ಯಕ್ರಮ ನಿರೂಪಿಸಿ, ಕಿಶನ್ ವಂದಿಸಿದರು.