ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ: ಡಿಸಿ ವಿದ್ಯಾಕುಮಾರಿ

Update: 2024-08-13 14:33 GMT

ಉಡುಪಿ, ಆ.13: ಹಿಂದುಳಿದ ವರ್ಗಗಳ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸಲು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಆಗಸ್ಟ್ 20ರಂದು ಬೆಳಗ್ಗೆ 10 ಗಂಟೆಗೆ ಡಿ.ದೇವರಾಜ ಅರಸುರ ಜನ್ಮ ದಿನಾಚರಣೆ ಕಾರ್ಯಕ್ರಮ ಮಿಷನ್ ಕಂಪೌಂಡಿನ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆಯಲಿದೆ. ಡಿ. ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಯ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಗು ವುದು ಎಂದರು.

ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ವ್ಯಕ್ತಿತ್ವ ಮತ್ತು ಸಾಧನೆಯ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದ ಅವರು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸೇರಿದಂತೆ ವಿವಿಧ ಸ್ಫರ್ಧೆಗಳನ್ನು ಆಯೋಜಿಸಬೇಕು. ಎಸೆಸೆಲ್ಸಿ, ಪಿಯುಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಬೇಕು ಎಂದರು.

ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದ ಅವರು ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ನಡೆಸಲು ವಿವಿಧ ಉಪಸಮಿತಿಗಳನ್ನು ರಚಿಸಲು ಸೂಚನೆ ನೀಡಿದರು.

ಡಿ. ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಅವರ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಅನುಕೂಲವಾಗುವಂತೆ ಹೆಚ್ಚಿನ ಪ್ರಚಾರ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಪೌರಾಯುಕ್ತ ರಾಯಪ್ಪ, ವಾರ್ತಾಧಿಕಾರಿ ಮಂಜುನಾಥ್ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News