ಉಡುಪಿ| ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

Update: 2024-10-17 14:12 GMT

ನಾಗೇಶ್ ಪೂಜಾರಿ

ಉಡುಪಿ, ಅ.17: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಎಂಬಾತನಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧು ಪಡಿಸಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಕಳೆದ ವಾರ ನಂಜನಗೂಡಿನಲ್ಲಿ ಬಂಧಿಸಿದ್ದರು.

ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದು, ಅ.16 ಬುಧವಾರ ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News