ಯುವ ಸಂಸತ್‌ನಿಂದ ಮಕ್ಕಳ ಪ್ರತಿಭೆ ಅನಾವರಣ: ಉಡುಪಿ ಸಿಇಓ ಪ್ರಸನ್ನ ಎಚ್

Update: 2023-11-10 15:31 GMT

ಉಡುಪಿ, ನ.10: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಹಾಗೂ ಅವರ ಆಲೋಚನೆಗಳನ್ನು ಮುಕ್ತವಾಗಿ ಚರ್ಚಿಸಲು ಯುವ ಸಂಸತ್ ಒಂದು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಂಸ ದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಶುಕ್ರವಾರ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜನಪ್ರತಿನಿಧಿಗಳು ಜಿಲ್ಲೆಯ ಸಮಸ್ಯೆಗಳನ್ನು ಚರ್ಚಿಸಿ, ನಿರ್ಣಯ ಮಾಡಿ ಅಭಿವೃದ್ಧಿ ಪಡಿಸಲು ಹಲವು ವಿಚಾರಗಳನ್ನು ಅನು ಷ್ಠಾನಗೊಳಿಸುವ ಈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿ. ಯುವಸಂಸತ್ತಿನಲ್ಲಿ ಕುಳಿತು ಮಾತನಾಡುವಾಗ ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಹಾಗೂ ತಾಳ್ಮೆ ಇರಬೇಕು ಎಂದರು.

ದೇಶದ ಅಭಿವೃದ್ಧಿಯ ಬಗ್ಗೆ ಸಂಸತ್ತಿನ ವೇದಿಕೆಯಲ್ಲಿ ಚರ್ಚೆಗಳು ನಡೆಯುತ್ತವೆ. ಅಲ್ಲಿ ಕೇವಲ ಕಲಹಗಳೇ ನಡೆಯುವುದಲ್ಲ. ಗಂಭೀರ ವಿಚಾರಗಳನ್ನು ಚರ್ಚಿಸಲು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಕಾನೂನುಗಳು ಇಲ್ಲಿ ರೂಪುಗೊಳ್ಳು ತ್ತವೆ. ಯುವ ಸಂಸತ್ತಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಗೆದ್ದವರು ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಅಲ್ಲಿಯೂ ವಿಜೇತರಾಗಿ ಉಡುಪಿ ಜಿಲ್ಲೆಗೆ ಕೀರ್ತಿ ತರುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದು ಈ ಕಾರ್ಯಕ್ರಮದ ಉದ್ದೇಶ. ಇಂತಹ ಕಾರ್ಯಕ್ರಮ ಗಳಿಂದ ವಿದ್ಯಾರ್ಥಿಗಳಲ್ಲಿರುವ ಸಾಮಾನ್ಯ ಜ್ಞಾನ ಸುಧಾರಿಸುತ್ತದೆ. ಉತ್ತಮ ವಿಚಾರಗಳಿಂದ ಸಕಾರಾತ್ಮಕ ನಿರ್ಣಯಗಳನ್ನು ಕೈಗೊಂಡಾಗ ಜಿಲ್ಲೆ, ರಾಜ್ಯ ಹಾಗೂ ದೇಶ ಅಭಿವೃದಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿಡಿಪಿಐ ಗಣಪತಿ ಕೆ ಮಾತನಾಡಿ, ಮಕ್ಕಳಿಗೆ ಎಲ್ಲಾ ರೀತಿಯ ಅವಕಾಶ ಹಾಗೂ ಸೌಲಭ್ಯಗಳು ದೊರಕಬೇಕು ಎಂಬ ದೃಷ್ಟಿಯಿಂದ ಇಲಾಖಾ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಆಶಯ ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿ ಜೀವನದಿಂದಲೇ ಅರಿವು ಮೂಡಿಸಲು ಈ ಕಾರ್ಯಕ್ರಮ ನೆರವಾಗಲಿದೆ ಎಂದರು.

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು, ಕಲಾಪಗಳು ನಡೆಯುವ ಕುರಿತು ಅರಿವು ಮೂಡಿಸಲು ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಅವಕಾಶಗಳನ್ನು ಬಳಸಿಕೊಂಡು ಅವುಗಳಲ್ಲಿ ತೊಡಗಿಸಿಕೊಂಡಾಗ ಶಿಕ್ಷಣದ ಜೊತೆಗೆ ಉತ್ತಮ ಸತ್ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದ ಡಿಡಿಪಿಐ, ಶಿಕ್ಷಕರು ಶಾಲಾ ಹಂತಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಅವರಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾ ಹಿಸಿ, ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸಲು ಸಹಕಾರ ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮ್ಯಾನೆಜರ್ ಪಿಂಜಾರ, ಹಣಕಾಸು ಸಲಹೆಗಾರ್ತಿ ಮೀರಾ ಕುಮಾರಿ, ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಸಾಣೂರು ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಗಣೇಶ್ ಮೊಗೇರ ವಂದಿಸಿದರು.


 



Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News