ರಾ.ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆಯಲ್ಲಿ ನಡೆಸಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಂಸದೆ ಶೋಭಾ ಸೂಚನೆ

Update: 2023-08-23 14:11 GMT

ಉಡುಪಿ, ಆ.23:ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ತ್ವರಿತವಾಗಿ ಪೂರ್ಣ ಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರಾಷ್ಟ್ರೀಯ ಹೆದ್ದಾರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169, 169ಎಗೆ ಸಂಬಂಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಷ್ಟ್ರೀಯ ಹೆದ್ದಾರಿ 66 ಹಾಗೂ ರಾ.ಹೆದ್ದಾರಿ 169 ಎಯಲ್ಲಿ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಕೆಲಸವನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಮಳೆ ಕಡಿಮೆ ಇರುವ ಕಾರಣ ಕಾಮಗಾರಿಗಳನ್ನು ಪುನರಾ ರಂಭಿಸಿ, ತ್ವರಿತ ಗತಿಯಲ್ಲಿ ಕೈಗೊಳ್ಳುವುದರೊಂದಿಗೆ ಗುಣಮಟ್ಟದಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾ. ಹೆ. 66ರ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿಯನ್ನು ಕೈಗೊಳ್ಳುವಾಗ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಣ್ಣು ಕುಸಿಯದ ಹಾಗೆ ರೀಟೈನಿಂಗ್ ವಾಲ್‌ಗಳನ್ನು ಹೆಚ್ಚು ಕಾರ್ಮಿಕ ರುಗಳನ್ನು ನಿಯೋಜಿಸುವ ಮೂಲಕ ದಿನದ 24ಗಂಟೆಗಳ ಕಾಲವೂ ಶಿಫ್ಟ್‌ನಲ್ಲಿ ಕೆಲಸ ನಿರ್ವಹಿಸುವಂತೆ ಅವರು ತಿಳಿಸಿದರು.

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ಬಂದರುವರೆಗಿನ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣ ಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಬೇಕು. ಈ ರಸ್ತೆಯಲ್ಲಿ ಹೆಚ್ಚು ಪ್ರವಾಸಿಗರು ಹಾಗೂ ಮೀನುಗಾರಿಕಾ ಚಟುವಟಿಕೆ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಬದಲಿ ರಸ್ತೆ ಮಾರ್ಗದ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಬೇಕು ಎಂದರು.

ರಾ.ಹೆ.169ರ ಇಂದ್ರಾಳಿ ರೈಲ್ವೆ ಸೇತುವೆಯ ಕಾಮಗಾರಿಯನ್ನು ನವೆಂಬರ್ ಒಳಗೆ ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಬೇಕು. ಈಗಾಗಲೇ ಸೇತುವೆಯ ಮೇಲೆ ಸಂಚರಿಸುತ್ತಿರುವ ವಾಹನ ಗಳ ಸಂಚಾರಕ್ಕೆ ಅಗತ್ಯವಿರುವ ಕಾಮಗಾರಿಗಳನ್ನು ಪೊಲೀಸ್ ಅಧೀಕ್ಷಕರ ಸೂಚನೆಯನ್ವಯ ಕೈಗೊಳ್ಳಬೇಕೆಂದು ತಿಳಿಸಿದರು.

ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗೆ ಯಾವುದೇ ಕೊರತೆಯಾಗ ದಂತೆ ನೋಡಿ ಕೊಳ್ಳಬೇಕು ಎಂದ ಅವರು, ಗ್ರಾಮೀಣ ಭಾಗದಲ್ಲಿ ರೈಲ್ವೆ ಹಳಿಗಳ ದಾಟುವ ರಸ್ತೆಗಳ ನಿರ್ಮಾಣಕ್ಕೆ ಅನು ಮತಿ ಪತ್ರವನ್ನು ನೀಡಬೇಕೆಂದು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಡೆಂಗಿ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕೇಳಿ ಬರುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಅವುಗಳ ನಿಯಂತ್ರಣಕ್ಕೆ ಅಗತ್ಯವಿ ರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದವರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಾ.ಹೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡಾಗ ಮಾತ್ರ ಅಪಘಾತಗಳು ಆಗುವುದನ್ನು ತಪ್ಪಿಸಲು ಸಾಧ್ಯ.ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News