ಜಲಜೀವನ್ ಮಿಷನ್ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಉಡುಪಿ ಜಿಪಂ ಸಿಇಓ ಪ್ರಸನ್ನ

Update: 2023-08-16 15:01 GMT

ಉಡುಪಿ, ಆ.16: ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಮನೆ ಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಜಲ ಜೀವನ್ ಮಿಷನ್‌ನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸುವಂತೆ ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಮುಂದಿನ ಬೇಸಿಗೆಯಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಈ ಯೋಜನೆಯಡಿ ಜಿಲ್ಲೆಯಲ್ಲಿ 2,47,190 ಮನೆಗಳಿಗೆ ನಳ್ಳಿಯ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 3 ಹಂತಗಳಲ್ಲಿ ಕಾಮಗಾರಿಗಳನ್ನು ಕೈಗೊಂಡು 1,90,974 ಮನೆಗಳಿಗೆ ನಳ್ಳಿ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬಾಕಿ ಉಳಿದ ಮನೆಗಳಿಗೆ ತ್ವರಿತವಾಗಿ ನೀರಿನ ಸಂಪರ್ಕವನ್ನು ಕಲ್ಪಿಸಬೇಕು ಎಂದರು.

3 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮೊದನೇ ಹಂತದಲ್ಲಿ 17 ಕಾಮಗಾರಿಗಳನ್ನು ಜಾಗದ ಸಮಸ್ಯೆ ಸೇರಿ ದಂತೆ ಮತ್ತಿತರೆ ಕಾರಣಗಳಿಂದ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಇವುಗಳನ್ನು ಆದ್ಯತೆಯ ಮೇಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಪೂರ್ಣ ಗೊಳಿಸಬೇಕು ಎಂದರು.

ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿ ನಾನಾ ಕಾರಣಗಳಿಂದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸದೇ ಇದ್ದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉದಯ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಡಿಡಿಪಿಐ ಗಣಪತಿ ಕೆ. ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News