ಸೌಲಭ್ಯಗಳನ್ನು ಬಳಸಿಕೊಂಡು ಆತ್ಮವಿಶ್ವಾಸದಿಂದ ಉನ್ನತ ಸಾಧನೆ ಮಾಡಿ: ವಿಕಲಚೇತನರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ

Update: 2025-03-28 21:38 IST
ಸೌಲಭ್ಯಗಳನ್ನು ಬಳಸಿಕೊಂಡು ಆತ್ಮವಿಶ್ವಾಸದಿಂದ ಉನ್ನತ ಸಾಧನೆ ಮಾಡಿ: ವಿಕಲಚೇತನರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರೆ
  • whatsapp icon

ಉಡುಪಿ: ಸರಕಾರ ಹಾಗೂ ಸಂಘಸಂಸ್ಥೆಗಳು ನೀಡುವ ವಿವಿಧ ಸಹಾಯ ಹಾಗೂ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದಲ್ಲಿ ಆತ್ಮವಿಶ್ವಾಸ ಉನ್ನತ ಸಾಧನೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ವಿಕಲಚೇತನರಿಗೆ ಕರೆ ನೀಡಿದ್ದಾರೆ.

ನಗರದ ಹೊಟೇಲ್ ಚಿತಾರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆಗಳು ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಆಯೋಜಿಸಿದ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವಾಹನಗಳ ವಿತರಣಾ ಕಾರ್ಯಕ್ರಮ ‘ನವಜೀವನ- ಹೊಸಬದುಕು’ನ್ನು ಉದ್ಘಾಟಿಸಿ, ಒಟ್ಟು ಏಳು ಮಂದಿ ವಿಕಲಚೇತನರ ಗಾಲಿಕುರ್ಚಿಗಳಿಗೆ ಬ್ಯಾಟರಿ ಚಾಲಿತ ವಾಹನಗಳ ಕೀಲಿಕೈಯನ್ನು ವಿತರಿಸಿ ಮಾತನಾಡುತಿದ್ದರು.

ಇಂದು ಸರಕಾರ ಹಾಗೂ ಸಂಘ- ಸಂಸ್ಥೆಗಳು ವಿಕಲಚೇತನರಿಗೆ, ವಿಶೇಷ ಚೇತನರಿಗೆ ಅನೇಕ ರೀತಿಯಲ್ಲಿ ಸಹಾಯ-ಸೌಲಭ್ಯಗಳನ್ನು ನೀಡುತ್ತಿವೆ. ಇವರು ತಮ್ಮೆಲ್ಲಾ ನ್ಯೂನ್ಯತೆಗಳನ್ನು ಬದಿಗೊತ್ತಿ ಸೌಲಭ್ಯಗಳನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡು, ನಾವೂ ಸಾಮಾನ್ಯರಂತೆ ಬದುಕಬಲ್ಲೆವು ಎಂಬ ಆತ್ಮವಿಶ್ವಾಸವನ್ನು, ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ವಿಶೇಷ ಚೇತನರು ದುರ್ಬಲರಲ್ಲ ಎಂಬ ಭಾವನೆ ಅವರಲ್ಲಿ ಮೂಡಿಸಲು ಸರಕಾರ ಹಲವು ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕೆಲವು ಸಂಸ್ಥೆಗಳು ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಯನ್ನು ಸಹ ನೀಡುತ್ತಿವೆ. ಈ ನಿಟ್ಟಿನಲ್ಲಿ ಮಣಿಪಾಲ್ ಟೆಕ್ನಾಲಜೀಸ್ ಸಂಸ್ಥೆ ತಮ್ಮ ಸಿಎಸ್‌ಆರ್ ನಿಧಿಯನ್ನು ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಬಳಸುತ್ತಿರುವುದು ಶ್ಲಾಘನೀಯ ಎಂದರು.

ಸಂವಿಧಾನದ ಆಶಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ದೇಶದ ಎಲ್ಲಾ ನಾಗರಿಕರಂತೆ ವಿಶೇಷ ಚೇತನರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದು ಸಂವಿಧಾನದ ಆಶಯ. ಅದರಂತೆ ಅವರನ್ನು ಸಬಲೀಕರಣಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆರೋಗ್ಯ ಸೇವೆಯಲ್ಲಿ ಹೊಸ ರೀತಿಯ ಉಪಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಜಿಲ್ಲೆ ಮಹತ್ವದ ಸ್ಥಾನ ಪಡೆಯುವಂತಾಗಲಿ ಎಂದರು.

ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ರೊನಾಲ್ಡ್ ಡಿ ಸೋಜಾ ಯೋಜನೆಯ ಉದ್ದೇಶ ಕುರಿತು ಮಾತನಾಡಿ, 1941ರಲ್ಲಿ 15 ಜನ ಉದ್ಯೋಗಿಗಳಿಂದ ಸ್ಥಾಪನೆಯಾದ ಮಣಿಪಾಲ್ ಟೆಕ್ನಾಲಜಿಸ್ ಸಂಸ್ಥೆಯು ಇಂದು ದೇಶದಾದ್ಯಂತ ತನ್ನ ಶಾಖೆಯನ್ನು ವಿಸ್ತರಿಸುವುದರೊಂದಿಗೆ ಮಣಿಪಾಲದಲ್ಲೇ ಸಾವಿರಾರು ಮಂದಿಗೆ ಉದ್ಯೋಗಾ ವಕಾಶ ನೀಡಿದೆ.ಸಂಸ್ಥೆಯ ಸಿಎಸ್‌ಆರ್ ನಿಧಿಯನ್ನು ಜವಾಬ್ದಾರಿಯುತವಾಗಿ ಉತ್ತಮ ಕೆಲಸ ಕಾರ್ಯಗಳಿಗೆ ವಿನಿಯೋಗಿಸಿಕೊಂಡು ಬರಲಾಗುತ್ತಿದೆ ಎಂದರು.

ಜಿಲ್ಲೆಯು ಶೈಕ್ಷಣಿಕವಾಗಿ ಅಗ್ರಸ್ಥಾನದಲ್ಲಿರುವ ಹಿನ್ನೆಲೆಯಲ್ಲಿ ಬಡ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲು ಜಿಲ್ಲೆಯ ಕೆಲವು ಸರಕಾರಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು, ಶೌಚಾಲಯ ನಿರ್ಮಾಣ, ಸ್ಮಾರ್ಟ್‌ಕ್ಲಾಸ್, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಲು, ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ವೈದ್ಯಕೀಯ ನೆರವು ನೀಡಲು ಬಳಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿದರು. ಜಿಲ್ಲಾ ಮಲೇರಿಯಾ ನಿಯಂತ್ರ ಣಾಧಿಕಾರಿ ಡಾ.ಪ್ರಶಾಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಣಿಪಾಲ್ ಟೆಕ್ನಾಲಜೀಸ್ ವತಿಯಿಂದ ನೀಡಲಾದ ಉತ್ತಮ ಗುಣಮಟ್ಟದ ಶ್ರವಣ ಸಾಧನಗಳನ್ನು 14 ಮಂದಿ ಫಲಾನುಭವಿ ಗಳಿಗೆ ವಿತರಿಸಲಾಯಿತು. ಏಳು ಮಂದಿಗೆ ಬ್ಯಾಟರಿ ಚಾಲಿತ ಗಾಲಿ ಕುರ್ಚಿ ವಾಹನಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಿಲ್ಲೆಯ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಆಲಂದೂರು ಮಂಜುನಾಥ ಎಸ್.ಗಾಣಿಗ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


 






 

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News