ಗೃಹಲಕ್ಷ್ಮೀಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ: ಎಸಿ ರಶ್ಮೀ

Update: 2023-08-30 14:58 GMT

ಕುಂದಾಪುರ, ಆ.30: ಜಿಲ್ಲೆಯಲ್ಲಿ 2 ಲಕ್ಷದ 8 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಾಯಿಸಿದ್ದು ಇದರ ಪ್ರಯೋಜನ ಪಡೆಯಲಿದ್ದಾರೆ. ಖಾತೆಗೆ ಬರುವ 2 ಸಾವಿರ ರೂ. ಹಣವನ್ನು ಕುಟುಂಬದ ಉತ್ತಮ ಬೇಡಿಕೆ ಪೂರೈಸಲು ಸಹಕಾರಿಯಾಗುವ ವಿಶ್ವಾಸವಿದೆ. ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡಾಗ ದೇಶ ಉನ್ನತಿ, ಪ್ರಗತಿಪತದತ್ತ ಸಾಗಲಿದೆ ಎಂದು ಕುಂದಾಪುರ ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಉಡುಪಿ, ತಾ.ಪಂ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಂಡ್ಸೆ ಗ್ರಾ.ಪಂ ಸಹಯೋಗದಲ್ಲಿ ಬುಧವಾರ ವಂಡ್ಸೆಯ ಮಹಾತ್ಮಗಾಂಧಿ ಸಭಾಭವನದಲ್ಲಿ ಹಮ್ಮಿಕೊಂಡ ರಾಜ್ಯ ಸರ ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ’ಗೃಹಲಕ್ಷ್ಮಿ ಯೋಜನೆ ಅನುಷ್ಠಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಾಂಧೀಜಿಯವರ ಪರಿಕಲ್ಪನೆಯಂತೆ ಮಹಿಳೆಯರಿಗೆ ಶಿಕ್ಷಣ ನೀಡಿದಲ್ಲಿ ಕುಟುಂಬದ ಅಭಿವೃದ್ಧಿ ಸಾಧ್ಯ. ಅದರಂತೆಯೇ ಪ್ರತಿ ಮನೆಯಲ್ಲಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಒಳ್ಳೆಯ ಬದುಕು ಕಟ್ಟಿಕೊಳ್ಳಲು ಪೂರಕ ವ್ಯವಸ್ಥೆ ಮಾಡಬೇಕು. ಸರಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು. ವಂಡ್ಸೆ ಗ್ರಾ.ಪಂ ಹಾಗೂ ಉಡುಪಿ ಜಿಲ್ಲಾ ಕೇಂದ್ರದಲ್ಲಿ ಈ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಕ್ಕೂ ದ್ವಿಮುಖ ಸಂವಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಯೋಜನೆಯ ಫಲಾನುಭವಿಗಳಾದ ಹಿರಿಯ ಮಹಿಳೆಯರಿಬ್ಬರಿಂದ ಕಾರ್ಯ ಕ್ರಮ ಉದ್ಘಾಟಿಸಲಾಯಿತು. ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು. ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್.ಎಸ್., ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ ಜೋಗಿ, ಕುಂದಾಪುರ ತಾಪಂ ಕಾರ್ಯ ನಿರ್ವಹಣಾಧಿಕಾರಿ ಶಶಿಧರ್ ಕೆ.ಜೆ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಕೃಷ್ಣಪ್ಪ ಬಿ.ಎಚ್., ಸಹಾಯಕ ತೋಟ ಗಾರಿಕಾ ಅಧಿಕಾರಿ ಉಮೇಶ್ ಎನ್.ಬಂಟ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ತಾಪಂ ಮಾಜಿ ಮಾಜಿ ಸದಸ್ಯ ಉದಯ್ ಪೂಜಾರಿ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

ವಂಡ್ಸೆ ಗ್ರಾಪಂ ಮಾಜಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಒ ರೇಣುಕಾ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News