ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಪರಿಷ್ಕೃತ ಚುನಾವಣಾಧಿಕಾರಿಗಳ ನೇಮಕ
ಉಡುಪಿ, ಆ.10: ಜಿಲ್ಲೆಯ ಉಡುಪಿ, ಕಾಪು, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡುವ ಸಲುವಾಗಿ ಈ ಕೆಳಕಂಡ ಪರಿಷ್ಕೃತ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ತಾಲೂಕಿನ ಬೈರಂಪಳ್ಳಿ ಮತ್ತು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಡಿ, ಅಂಬಲಪಾಡಿ ಮತ್ತು ಕಡೆಕಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಮಲ್ಪೆ ಮೀನುಗಾರಿಕಾ ಉಪನಿರ್ದೇಶಕ ಕುಮಾರಸ್ವಾಮಿ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ.
ಕಾಪು ತಾಲೂಕಿನ ಕುರ್ಕಾಲು, ಶಿರ್ವಾ ಮತ್ತು ಕಟಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಗಿರೀಶ್, ಕುತ್ಯಾರು ಹಾಗೂ ಎಲ್ಲೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಅಧಿಕಾರಿಯಾಗಿ ಲೋಕೋಪ ಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಸೋಮನಾಥ ಅವರನ್ನು ನೇಮಿಸಲಾಗಿದೆ.
ಬೈಂದೂರು ತಾಲೂಕಿನ ಕೊಲ್ಲೂರು, ಜಡ್ಕಲ್ ಮತ್ತು ಗೋಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಅಧಿಕಾರಿಯಾಗಿ ಕೊಲ್ಲೂರು ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ದೀಪಕ್ ನಾಯಕ್ ಹಾಗೂ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಮತ್ತು ಕೋಟ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಅಧಿಕಾರಿಯಾಗಿ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಉಮಾ ಪಿ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.