ಲೋಕಸಭಾ ಚುನಾವಣೆಯ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ: ಉಡುಪಿ ಜಿಲ್ಲಾಧಿಕಾರಿ

Update: 2023-11-18 14:53 GMT

ಉಡುಪಿ, ನ.18: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಚುನಾ ವಣಾ ಆಯೋಗ ನೀಡಿರುವ ಮಾರ್ಗದರ್ಶನ ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್, ಸೆಕ್ಟರ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಸೆಕ್ಟರ್ ಅಧಿಕಾರಿಗಳಾಗಿ ನೇಮಕಗೊಂಡಿರುವ ಪ್ರತಿಯೊಬ್ಬ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿ, ಲಭ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ, ಈ ಹಿಂದೆ ಭೀತಿ ಹುಟ್ಟಿಸುವ ಪ್ರಕರಣಗಳು ನಡೆದಿವೆಯೇ ಎಂಬ ಬಗ್ಗೆ ಶೀಘ್ರದಲ್ಲಿ ವರದಿ ನೀಡಬೇಕು ಎಂದರು.

ಚುನಾವಣೆಗೆ ನೇಮಿಸಿರುವ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಮುಂದಾಗ ಬೇಕು. ಯಾವುದೇ ಅಧಿಕಾರಿಗಳನ್ನು ಚುನಾವಣೆ ಕರ್ತವ್ಯದಿಂದ ಮುಕ್ತ ಗೊಳಿಸಲು ಆಸ್ಪದವಿಲ್ಲ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾತನಾಡಿ, ಪೊಲೀಸ್, ಸೆಕ್ಟರ್ ಆಫೀಸರ್ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕೆಲಸ ಮಾಡುವುದರೊಂದಿಗೆ ಚುನಾವಣೆಯಲ್ಲಿ ಯಾವುದೇ ಗೊಂದಲಗಳಾಗದಂತೆ ಎಚ್ಚರ ವಹಿಸಬೇಕು. ಚುನಾವಣಾ ಆಯೋಗ ತಿಳಿಸಿರುವ ವರದಿಯನ್ನು ಶೀಘ್ರದಲ್ಲಿಯೇ ನೀಡಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಮಾತನಾಡಿ, ಪೊಲೀಸ್ ಸೆಕ್ಟರ್ ಆಫೀಸರ್ ಹಾಗೂ ಇತರ ಇಲಾಖೆಯ ಅಧಿಕಾರಿಗಳು ತಮ್ಮ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇವಿಎಂ ಮತಯಂತ್ರ ಹಾಗೂ ಮತದಾನ ಪ್ರಕ್ರಿಯೆ ಕುರಿತು ನವೆಂಬರ್ 25ರಿಂದ ಫೆಬ್ರವರಿ ಮೊದಲ ವಾರದೊಳಗೆ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನೀಡುವ ಮೂಲಕ ಅರಿವು ಮೂಡಿಸುವುದರೊಂದಿಗೆ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಹಾಗೂ ನೋಡೆಲ್ ಅಧಿಕಾರಿ ಡಾ. ಅಶೋಕ್ ಕಾಮತ್ ಪೊಲೀಸ್, ಸೆಕ್ಟರ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಚುನಾವಣಾ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಕುರಿತು ತರಬೇತಿಯನ್ನು ಸವಿಸ್ತಾರವಾಗಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News