ಬೋಟ್ ಗುತ್ತಿಗೆದಾರರಿಗೆ ನೋಟೀಸು ನೀಡಿ; ಕ್ರಮಕೈಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ

Update: 2023-11-15 15:32 GMT

ಉಡುಪಿ, ನ.15: ಮಲ್ಪೆ ಸೀವಾಕ್ ಹಾಗೂ ಬೀಚ್‌ನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ಪ್ರವಾಸಿ ಬೋಟುಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಸುವ ಹಾಗೂ ಪ್ರಯಾಣಿಕರಿಗೆ ಸೂಕ್ತ ರೀತಿಯ ಲೈಫ್‌ ಜಾಕೆಟ್‌ಗಳನ್ನು ಧರಿಸಲು ನೀಡದೇ ಕರೆದೊಯ್ಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಇದರ ಗುತ್ತಿಗೆ ಹೊಂದಿರುವ ಗುತ್ತಿಗೆದಾರರಿಗೆ ಈ ಕೂಡಲೇ ನೋಟೀಸ್ ನೀಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮಲ್ಪೆ ಬೀಚ್‌ನಲ್ಲಿ ಹಾಗೂ ಸೈಂಟ್ ಮೇರೀಸ್ ಐ-ಲ್ಯಾಂಡ್‌ನಲ್ಲಿ ಹೊರಗಿ ನಿಂದ ಬರುವ ಪ್ರವಾಸಿಗರಿಗೆ ನೀರಿನ ಆಳ ಹಾಗೂ ಬಲದ ಅರಿವಿರುವುದಿಲ್ಲ. ಹೀಗಾಗಿ ಸುರಕ್ಷತೆ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಕಳೆದ ಸಾಲಿನಲ್ಲಿ ಅನೇಕ ಜನರು ನೀರಿನಲ್ಲಿ ಆಡುವಾಗ ಮುಳುಗಿ ಮೃತರಾಗಿರುವ ಪ್ರಕರಣಗಳು ವರದಿಯಾಗಿವೆ. ಇವುಗಳು ಮುಂದಿನ ದಿನಗಳಲ್ಲಿ ಮರು ಕಳಿಸದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದರ ಜೊತೆಗೆ ಜೀವ ರಕ್ಷಕ ಸಿಬ್ಬಂದಿಗಳಿಗೆ ಹೆಚ್ಚಿನ ರೀತಿಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತು ತರಬೇತಿ ನೀಡಿ, ನಿಯೋಜಿಸಬೇಕು ಎಂದು ನಿರ್ದೇಶ ನೀಡಿದರು.

ಈಗಾಗಲೇ ಸಮುದ್ರ ತೀರದಲ್ಲಿ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿದಾಗ ಅವರ ರಕ್ಷಣೆಗೆ ಬಳಸುವ ಜೆಟ್‌ಸ್ಕೀ ಬೋಟುಗಳನ್ನು ದುರಸ್ಥಿ ಮಾಡುವು ದರೊಂದಿಗೆ ಸುಸ್ಥಿತಿಯಲ್ಲಿಟ್ಟುಕೊಂಡು ಅವಘಡಗಳು ಸಂಭವಿಸಿದಾಗ ಅವುಗಳನ್ನು ಬಳಸಲು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದರು.

ಬೀಚ್ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಕಾಟೇಜು, ಹೋಟೆಲ್‌ಗಳಿಂದ ರಾಜಸ್ವ ಶುಲ್ಕವನ್ನು ಆಗಿಂದಾಗ್ಗೆ ವಸೂಲಿ ಮಾಡಬೇಕು. ಒಂದೊಮ್ಮೆ ಅವರ ಗುತ್ತಿಗೆ ಅವಧಿ ಮುಗಿದಲ್ಲಿ ಹೊಸದಾಗಿ ಗುತ್ತಿಗೆ ಆಧಾರದ ಮೇಲೆ ನೀಡಲು ಸಮಿತಿಯ ತೀರ್ಮಾನದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶದಲ್ಲಿ ಹೈಮಾಸ್ಟ್ ಕಂಬಗಳಿಗೆ ದೀಪ ಅಳವಡಿ ಸುವುದು, ದುರಸ್ಥಿ ಹಾಗೂ ಹೊಸ ದಾರಿದೀಪ ಅಳವಡಿ ಸುವ ಕಾಮಗಾರಿ ಯನ್ನು ಗುಣಮಟ್ಟದೊಂದಿಗೆ ನಿಗದಿತ ಕಾಲಾವಧಿಯೊಳಗೆ ಪೂರ್ಣಬೇಕೆಂದು ಸೂಚನೆ ನೀಡಿದರು.

ಸುರಕ್ಷತೆಗೆ ಆದ್ಯತೆ ನೀಡಿ: ಮಲ್ಪೆ ಬೀಚ್‌ನಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಬೇಕು. ಯಾವುದೇ ಸಾವು-ನೋವುಗಳು ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಡಾ.ಕೆ.ವಿದ್ಯಾಕುಮಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಲ್ಪೆ ಕಡಲ ತೀರದ ಸುಧಾರಣೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ಆಧುನಿಕ ಅಭಿವೃದ್ಧಿಯ ಮೂಲಸೌಕರ್ಯಗಳನ್ನು ಒದಗಿಸಲು ಕಡಲ ತೀರದ ನೈಸರ್ಗಿಕ ಸೌಂದರ್ಯ ಹಾಗೂ ಪರಿಸರಕ್ಕೆ ಮಾರಕವಾಗದಂತೆ ಮಾಸ್ಟರ್ ಪ್ಲಾನ್‌ನ್ನು ತಯಾರಿಸಬೇಕು ಎಂದರು.

ಮಾಸ್ಟರ್ ಪ್ಲಾನ್‌ಗಳನ್ನು ತಯಾರಿಸುವ ಮುನ್ನ ಸ್ಥಳೀಯ ನುರಿತ ಅನುಭವಿಗಳು, ಮೀನುಗಾರರೊಂದಿಗೆ ಸಮುದ್ರದಲ್ಲಿ ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಸಮುದ್ರಗಳ ಏರಿಳಿತಗಳ ಕುರಿತು ಚರ್ಚಿಸಿ, ಮಾಹಿತಿ ಪಡೆದು ಸ್ಥಳೀಯ ಮೀನುಗಾರಿಕೆಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ರೂಪಿಸಬೇಕು ಎಂದು ಸಲಹೆ ನೀಡಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಮಲ್ಪೆ ಬೀಚ್ ಪ್ರದೇಶದಲ್ಲಿ ಜಲಸಾಹಸ ಚಟುವಟಿಕೆಗಳು ಸೇರಿದಂತೆ ವಿವಿಧ ಪ್ರವಾಸಿ ಚಟುವಟಿಕೆಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡುವ ಮುನ್ನ ಪ್ರವಾಸಿಗರ ಸುರಕ್ಷತೆ ಸೇರಿದಂತೆ ಪ್ರವಾಸಿಗರಿಗೆ ಆರ್ಥಿಕ ಹೊರೆ ಆಗದಂತೆ ಷರತ್ತುಗಳನ್ನು ವಿಧಿಸಿ ಗುತ್ತಿಗೆ ನೀಡಬೇಕು. ಮಲ್ಪೆ ಬೀಚ್‌ನ ಸಮಗ್ರ ಅಭಿವೃದ್ಧಿಗೆ ಉತ್ತಮ ರೀತಿಯ ನೀಲನಕ್ಷೆಯನ್ನು ತಯಾರಿಸಿ, ಅಭಿವೃದ್ಧಿಪಡಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಲ್ಪೆ ವಿಭಾಗದ ನಗರಸಭಾ ಸದಸ್ಯರು, ಭಜನಾ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News