ಸಣ್ಣ ಮಕ್ಕಳಲ್ಲಿ ಅತಿಸಾರ ಬೇಧಿ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Update: 2023-11-15 15:34 GMT

ಉಡುಪಿ, ನ.15: ಸಣ್ಣ ಮಕ್ಕಳಲ್ಲಿ ಅತಿಸಾರ ಬೇಧಿ ಉಂಟಾದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುವುದರಿಂದ ಮಕ್ಕಳು ಉತ್ತಮ ಆರೋಗ್ಯದಿಂದಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ನಗರದ ಜಿಲ್ಲಾ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ವತಿಯಿಂದ ನಡೆದ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ, ನವಜಾತ ಶಿಶು ವಾರ ಹಾಗೂ ನ್ಯೂಮೋನಿಯಾ ವನ್ನು ಕೊನೆ ಗೊಳಿಸುವಲ್ಲಿ ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇತ್ತೀಚಿನ ದಿನಗಳಲ್ಲಿ ಅತಿಸಾರ ಬೇಧಿ ಹಿನ್ನೆಲೆಯಲ್ಲಿ ಮಕ್ಕಳ ಸಾವುಗಳು ಹೆಚ್ಚು ಸಂಭವಿಸುತ್ತಿವೆ. ಇದನ್ನು ತಪ್ಪಿಸಲು ಸರಕಾರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಕಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡುವುದರ ಜೊತೆಗೆ ಆ ಸಂದರ್ಭದಲ್ಲಿ ಜನರು ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂಬ ಪ್ರಾತ್ಯಕ್ಷಿಕೆಯನ್ನು ನೀಡಲಾಗುತ್ತಿದೆ ಎಂದರು.

ನವಜಾತ ಶಿಶುಗಳಿಗೆ ತಾಯಂದಿರು ತಪ್ಪದೇ ಎದೆ ಹಾಲನ್ನು ಕುಡಿಸಬೇಕು. ಇದರಿಂದಾಗಿ ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚುತ್ತದೆ. ಇದರ ಜೊತೆಯಲ್ಲಿ ಆರು ತಿಂಗಳ ನಂತರ ಪೌಷ್ಠಿಕ ಆಹಾರ ನೀಡಿದಲ್ಲಿ ಮಕ್ಕಳು ಸದೃಢ ರಾಗಿ ಬೆಳೆಯಲು ಸಹಕಾರಿಯಾಗುವುದರ ಜೊತೆಗೆ ಆರೋಗ್ಯ ಸುಧಾರಣೆ ಆಗುತ್ತದೆ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದಲ್ಲಿ ಮಾತ್ರ ಜನರು ಉತ್ತಮ ಆರೋಗ್ಯ ಹೊಂದಲು ಸಾಧ್ಯ. ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ, ನ್ಯೂಮೋನಿಯಾ ತಡೆಗಟ್ಟುವಿಕೆ ಸೇರಿದಂತೆ ಆರೋಗ್ಯ ಸೇವೆಗಳನ್ನು ಸಮುದಾಯದ ಸಹಭಾಗಿತ್ವ ದಲ್ಲಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಪ್ರಭಾರ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಆರ್‌ಎಂಓ ಡಾ.ವಾಸುದೇವ, ಡಾ. ವೇಣು ಗೋಪಾಲ್, ಡಾ.ರಾಜಗೋಪಾಲ ಭಂಡಾರಿ, ಡಾ.ಮಹಾದೇವ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಡಾ.ವೇಣುಗೋಪಾಲ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News