ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಅಧಿಕಾರಿಗಳಿಂದ ಕುಂಜಾರುಗಿರಿಯಲ್ಲಿ ಪೂರ್ವಭಾವಿ ಮಾನವ ಸರಪಳಿ

Update: 2024-09-12 13:53 GMT

ಉಡುಪಿ: ಇದೇ ಸೆ.15ರ ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯುವ ಮಾನವ ಸರಪಳಿ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಇಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಏರ್ಪಡಿಸಲಾದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಜನರು ಭಾಗವಹಿಸುವ ಮೂಲಕ ಅದನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ನುಡಿದರು.

ರಾಜ್ಯಾದ್ಯಂತ ಸೆ.15ರಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಇಂದು ಕುಂಜಾರುಗಿರಿಗೆ ಟ್ರೆಕ್ಕಿಂಗ್‌ ಅನ್ನು ಆಯೋಜಿಸಲಾಗಿತ್ತು. ಇದರಲ್ಲೂ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಸರಕಾರ ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ ಚಾಮರಾಜನಗರದವರೆಗೆ 250 ಕಿ.ಮೀ. ಉದ್ದಕ್ಕೆ ಸುಮಾರು 25 ಲಕ್ಷ ಜನತೆ ಪಾಲ್ಗೊಳ್ಳುವಿಕೆಯಲ್ಲಿ ಮಾನವ ಸರಪಳಿ ನಿರ್ಮಿಸಲು ನಿರ್ಧರಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ. ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರು, ರೋಟರಿ, ಲಯನ್ ಸಂಸ್ಥೆಗಳ ಸದಸ್ಯರು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತರಾಗಿ ಸರಪಳಿಯಲ್ಲಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಮಾನವ ಸರಪಳಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೂಲಕ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಜಿಲ್ಲೆಯಲ್ಲಿ ಪ್ರಾರಂಭಗೊಂಡು ಬಿಜೂರು, ಉಪ್ಪುಂದ, ಕಾರ್ಗಲ್, ಕಂಬದಕೋಣೆ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೊಸಾಡು, ಹೆಮ್ಮಾಡಿ, ಕಟ್‌ಬೆಲ್ತೂರು, ತಲ್ಲೂರು, ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಕೋಟ, ಕೋಟತಟ್ಟು, ಸಾಲಿಗ್ರಾಮ, ಪಾಂಡೇಶ್ವರ, ಐರೋಡಿ, ಹಂದಾಡಿ, ವಾರಂಬಳ್ಳಿ, ಚಾಂತಾರು, ಹಾರಾಡಿ, ಉಪ್ಪೂರು, ಅಂಬಲಪಾಡಿ, ಕಡೆಕಾರ್, ಉದ್ಯಾವರ, ಕಟಪಾಡಿ, ಕೋಟೆ, ಇನ್ನಂಜೆ, ಬಡಾ, ತೆಂಕ, ಪಡುಬಿದ್ರೆ ಗ್ರಾಮ ಪಂಚಾಯತ್ ಮೂಲಕ ಹಾದು ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸೇರುತ್ತದೆ ಎಂದರು.

ಜಿಲ್ಲೆಯಲ್ಲಿ ಏರ್ಪಡಿಸಲಾಗುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು, ಕುಟುಂಬ ಸಮೇತ ಕ್ರಿಯಾಶೀಲರಾಗಿ ಪಾಲ್ಗೊಂಡು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಇದನ್ನು ಆಚರಿಸುವಂತೆ ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕುಂಜಾರುಗಿರಿಯ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಮಾನವ ಸರಪಳಿಯನ್ನು ರಚಿಸಿ, ‘ಪ್ರಜಾಪ್ರಭುತ್ವವನ್ನು ಸಂಭ್ರಮಿಸೋಣ, ಮಾನವ ಸರಪಳಿಯನ್ನು ನಿರ್ಮಿಸೋಣ’ ಎಂಬ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕಾಪು ತಹಶೀಲ್ದಾರ್ ಪ್ರತಿಭಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


 






 

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News