ಕೇಂದ್ರ ಆರೋಗ್ಯ ಸಚಿವ ನಡ್ಡಾರನ್ನು ಭೇಟಿಯಾದ ಸಂಸದ ಕೋಟ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಉಡುಪಿ ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜನ್ನು ಮಂಜೂರುಗೊಳಿಸುವಂತೆ ಒತ್ತಾಯಿಸಿ ಮನವಿ ಯೊಂದನ್ನು ಅರ್ಪಿಸಿದರು.
ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯತಿ ಮತ್ತು 15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು, ಇದು ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣದಲ್ಲಿ ಮುಂದಿರುವ ಜಿಲ್ಲೆಯಾಗಿದ್ದು, ಈ ಜಿಲ್ಲೆಗೊಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜೊಂದರ ಅಗತ್ಯವಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಮಾಡಲು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ, ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಉಡುಪಿ ಜನತೆಗೆ ಉತ್ತಮವಾದ ಆರೋಗ್ಯ ಸೇವೆಗಾಗಿ, ಜಿಲ್ಲೆಗೊಂದು ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಬೇಕು ಎಂದು ಆರೋಗ್ಯ ಸಚಿವರಲ್ಲಿ ಸಂಸದ ಕೋಟ ವಿನಂತಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.