ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಪೊಲೀಸರಿಂದ ತೀವ್ರ ತನಿಖೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-08-25 09:45 GMT

ಉಡುಪಿ : ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಪೊಲೀಸರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದೇನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಮಾಹಿತಿ ಬಂದ ತಕ್ಷಣ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಡ ಘಟನೆ ಸಂಬಂಧಿಸಿದಂತೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ, ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಯಾವುದೇ ಹಿಂಜರಿಕೆಯಿಲ್ಲ. ಅವರು ದಿಟ್ಟ ಕ್ರಮ ಕೈಗೊಳ್ಳಲಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರಕಳಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News