ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿಯ ನ್ಯಾಯಾಂಗ ಬಂಧನ ಫೆ.12ರವರೆಗೆ ವಿಸ್ತರಣೆ

Update: 2024-02-07 15:18 GMT

ಪ್ರವೀಣ್ ಅರುಣ್ ಚೌಗುಲೆ

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಇಂದಿಗೆ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು.

ಫೆ.9ಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ: ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಫೆ.9ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಖಚಿತ ಮೂಲಗಳು ತಿಳಿಸಿವೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಶೇ.90ರಷ್ಟು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಪೊಲೀಸರ ಕೈಸೇರಿದೆ. ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ.

ಈ ಕೊಲೆ ಕೃತ್ಯ ನಡೆದು ಫೆ.12ಕ್ಕೆ ಮೂರು ತಿಂಗಳು ತುಂಬಲಿವೆ. ಆದುದರಿಂದ ಮೂರು ತಿಂಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ಗಡುವು ಇರುವುದರಿಂದ ಫೆ.9ರಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲ್ಲಿದ್ದಾರೆಂದು ಮೂಲಗಳು ದೃಢಪಡಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News