ಸೆ.9ರಂದು ರಾಷ್ಟ್ರೀಯ ಲೋಕ್ ಅದಾಲತ್

Update: 2023-08-02 14:48 GMT

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಸೆಪ್ಟಂಬರ್ 9ರಂದು ರಾಷ್ಟ್ರೀಯ ಲೋಕ್‌ಅದಾಲತ್‌ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಅದಾಲತ್‌ನಲ್ಲಿ ಸಾರ್ವಜನಿಕರು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದಗಳು, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಪ್ರಕರಣ ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸ ಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ: ೧೮೦೦-೪೨೫-೯೦೯೦೦, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ದೂ.ಸಂಖ್ಯೆ:೦೮೦-೨೨೧೧೧೮೭೫, ೦೮೦-೨೨೧೧೧೭೩೦, ವೆಬ್‌ಸೈಟ್ -www.kslsa.kar.nic.in -ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News