ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಅಗತ್ಯ: ಡಿಎಫ್‌ಓ ಗಣಪತಿ

Update: 2024-09-11 13:48 GMT

ಉಡುಪಿ, ಸೆ.11: ಅಪಘಾತ ಹಾಗೂ ಇತರೆ ಕಾಯಿಲೆಗಳ ಕಾರಣಗಳಿಂದ ಆಪತ್ತಿನಲ್ಲಿರುವ ವ್ಯಕ್ತಿಯ ಜೀವವನ್ನು ಕಾಪಾಡು ವಲ್ಲಿ ರಕ್ತದಾನವು ಪ್ರಮುಖ ವಾಗಿದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿಯ ಕೊರತೆ ಇದ್ದು, ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ರಕ್ತದಾನದಂತಹ ಮಹತ್ವ ಪೂರ್ಣವಾದ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದು ಅರಣ್ಯ ಇಲಾಖೆ ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥ ಇಂದು ನಗರದ ಪುರಭವನದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಮಾತನಾಡಿ, ರಕ್ತದಾನದಲ್ಲಿ ಪ್ರಸಿದ್ಧಿ ಹೊಂದಿರುವ ಉಡುಪಿ ಜಿಲ್ಲೆಯ ಬ್ಲಡ್ ಬ್ಯಾಂಕ್ ರಾಜ್ಯಕ್ಕೆ ಮಾದರಿಯಾಗಿದೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ರಕ್ತಕ್ಕಾಗಿ ಕರೆ ಬರುತ್ತದೆ. ಆದರೆ ನಮ್ಮಲ್ಲಿ ಮಾರ್ಚ್ ಎಪ್ರಿಲ್ ತಿಂಗಳಲ್ಲಿ ರಕ್ತದ ಕೊರತೆ ಎದುರಾಗುತ್ತದೆ. ಅಲ್ಲದೆ ನೆಗಟಿವ್ ರಕ್ತಗಳ ಅಭಾವ ನಮ್ಮ ಕಾಡುತ್ತದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.

ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಮಾತನಾಡಿ, ರಕ್ತದಾನ ಶ್ರೇಷ್ಠ ದಾನವಾಗಿದ್ದು, ಸಂಸ್ಥೆಯು ಕಳೆದ 24 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮ ಗಳನ್ನು ಕೈಗೊಂಡು ಸಮಾಜಕ್ಕೆ ಮಾದರಿಯಾಗಬೇಕಾಗಿದೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಎಚ್.ದೇವರಾಜ ಪಾಣ, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ರವೀಂದ್ರ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಮೂಡುಬಿದ್ರೆ ಉಪವಿಭಾಗದ ಎಸಿಎಫ್ ಶ್ರೀಧರ್ ಪಿ., ಕುಂದಾಪುರ ಉಪವಿಭಾಗದ ಎಸಿಎಫ್ ಪ್ರಕಾಶ್ ಕುಮಾರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಮಾಜಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೇಶವ ಪೂಜಾರಿ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕರುಣಾಕರ ಜೆ.ಆಚಾರ್ಯ ಸ್ವಾಗತಿಸಿದರು. ಜಯರಾಮ ಎ. ವಂದಿಸಿದರು. ಪ್ರಶಾಂತ್ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News