ಹೆಬ್ರಿಯ ಕೆರೆಬೆಟ್ಟು, ಶಿವಪುರಗಳಲ್ಲಿ ಹೊಸ ಕೈಗಾರಿಕಾ ಪ್ರದೇಶ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Update: 2025-03-26 22:32 IST
ಹೆಬ್ರಿಯ ಕೆರೆಬೆಟ್ಟು, ಶಿವಪುರಗಳಲ್ಲಿ ಹೊಸ ಕೈಗಾರಿಕಾ ಪ್ರದೇಶ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
  • whatsapp icon

ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ ಹಾಗೂ ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಜಮೀನು ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನಿನ ಭೂಮಾಲಕರಿಗೆ ಪೂರ್ಣ ಪರಿಹಾರಧನವನ್ನು ಪಾವತಿಸಿ, ನಿಯಮಾನುಸಾರ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ರಫ್ತು ಉತ್ತೇಜನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಹೆಬ್ರಿ ತಾಲೂಕಿನಲ್ಲಿ 36.56 ಎಕರೆ ಸರಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆ ಬಾಕಿ ಇದ್ದು, ಈ ಭೂಮಿ ಇಕೋ ಸೆನ್ಸಿಟೀವ್ ಝೋನ್‌ನಲ್ಲಿ ಬರುವ ಬಗ್ಗೆ ಪರಿಶೀಲನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಕೆಐಎಡಿಬಿ ಈ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿ, ಹೊಸ ಕೈಗಾರಿಕೆಗಳು ಸ್ಥಾಪನೆಗೊಂಡು ಜಿಲ್ಲೆಜನರಿಗೆ ಉದ್ಯೋಗ ದೊರಕುವಂತಾಗಬೇಕು ಎಂದರು.

ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳ ವಿಸ್ತೀರ್ಣಕ್ಕೆ ಗುರುತಿಸಲಾಗಿರುವ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಂಡು, ಹೊಸ ಕೈಗಾರಿಕೆಗಳ ಸ್ಥಾಪನೆಗೆ ಶೀಘ್ರವೇ ಅನುವು ಮಾಡಿಕೊಡಬೇಕು ಎಂದವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಪಡೆಯದೇ ಹಾಗೂ ಜಾಗಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲಾತಿ ನೀಡದೇ ಆರ್‌ಎಂಸಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಸಂಬಂಧ ಪಟ್ಟ ಮಾಲಕರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ ಅವರು, ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದರು.

ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ಮಿಯ್ಯಾರು ಕೈಗಾರಿಕಾ ಪ್ರದೇಶದಲ್ಲಿ ಪ್ರತಿಯೊಂದು ಕೈಗಾರಿಕಾ ಘಟಕಗಳೂ ಮಳೆ ನೀರು ಕೊಯ್ಲನ್ನು ಅಳವಡಿಸಿಕೊಳ್ಳಬೇಕು. ಇದರಿಂದಾಗಿ ಸ್ಥಳೀಯವಾಗಿಯೇ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 22 ರಫ್ತು ಆಧಾರಿತ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ವಿದೇಶಿ ರಫ್ತನ್ನು ಉತ್ತೇಜಿಸುವುದರೊಂದಿಗೆ ಚಟುವಟಿಕೆ ಗಳನ್ನು ಇನ್ನಷ್ಟು ಹೆಚ್ಚಿಸಬೇಕೆಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಮೂರ್ತಿ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ, ಶಿವಮೊಗ್ಗ ಕೆ.ಎಸ್.ಎಸ್.ಐ.ಡಿ.ಸಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನಾಗಾಭರಣ ಕೆ.ಪಿ, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News