ಸಮಸ್ಯೆ ಬಗೆಹರಿಸಿ, ಶೀಘ್ರವೇ ಹಕ್ಕುಪತ್ರ ವಿತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-01-17 12:46 GMT

ಬ್ರಹ್ಮಾವರ: ಸಮುದ್ರ ತೀರದಲ್ಲಿ ವಾಸವಾಗಿರುವವರು ಸೇರಿದಂತೆ ಅರ್ಜಿ ಸಲ್ಲಿಸಿದ ಎಲ್ಲ ಕುಟುಂಬಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಿಸುವ ಕಾರ್ಯ ಮಾಡಲಾಗುವುದು. ಈ ಸಂಬಂಧ ಸಮಸ್ಯೆ ಬಗೆಹರಿಸುವ ಕುರಿತು ಜಿಲ್ಲಾಧಿಕಾರಿಗೆ ಜೊತೆ ಚರ್ಚೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಹೇಳಿದ್ದಾರೆ.

ಬ್ರಹ್ಮಾವರ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ, ೫೫ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡುತಿದ್ದರು. ಗ್ರಾಮೀಣ ಪ್ರದೇಶದಲ್ಲಿ ನಿವೇಶನ ರಹಿತರಿಗೆ ಕನಿಷ್ಠ ಐದು ಸೆಂಟ್ಸ್ ಜಾಗ ನೀಡಬೇಕೆಂಬ ಬೇಡಿಕೆಯನ್ನು ಆದ್ಯತೆ ಯಲ್ಲಿ ಈಡೇರಿಸಲಾಗುವುದು ಎಂದರು.

ದೇಶದಲ್ಲಿ ಉಳುವವನೇ ಭೂ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದು ನಮ್ಮ ಪಕ್ಷದ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷ ಸದಾ ಬಡವರ ಪರವಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆ ಗಳನ್ನು ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲೇ ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಇದು ನಮ್ಮ ಸರಕಾರದ ಹೆಗ್ಗಳಿಕೆಯಾಗಿದೆ ಎಂದರು.

ಹಕ್ಕುಪತ್ರಕ್ಕಾಗಿ ೬೦೦ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಪೈಕಿ ಮೊದಲ ಹಂತದಲ್ಲಿ ೫೫ ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ಈ ಹಕ್ಕು ಪತ್ರಗಳನ್ನು ಪಡೆದವರು ಇ- ಸ್ವತ್ತಿನಡಿ ಖಾತೆ ಮಾಡಿಸಿಕೊಳ್ಳಬೇಕು. ಖಾತೆ ಮಾಡಿಸಿಕೊಳ್ಳು ವಾಗ ಅಧಿಕಾರಿಗಳು ಯಾವುದೇ ತೊಂದರೆ ಮಾಡದೆ ಶೀಘ್ರದಲ್ಲೇ ಕ್ರಮ ತೆಗೆದು ಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್.ವಿ.ಇಬ್ರಾಹಿಂಪುರ, ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನಿತ್ಯಾನಂದ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News