ಪ್ರತಿ ಅಧಿಕಾರಿಯೂ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಿ: ಉಡುಪಿ ಜಿಪಂ ಸಿಇಓ ಪ್ರತೀಕ್ ಬಾಯಲ್

Update: 2024-04-02 15:16 GMT

ಉಡುಪಿ, ಎ.2: ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರನೂ ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುವುದಕ್ಕೆ ಪ್ರತಿ ಮತದಾರರಿಗೆ ವ್ಯವಸ್ಥಿತ ಅರಿವು ಮೂಡಿಸಬೇಕು. ಹಾಗೂ ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ವಿವಿಧ ರೀತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎಪ್ರಿಲ್ 26 ರಂದು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಮತದಾರರು ಅಂದು ಮತದಾನ ಕೇಂದ್ರಗಳಿಗೆ ತೆರಳಿ ಯಾವುದೇ ಆಸೆ - ಆಮಿಷಗಳಿಗೆ ಒಳಗಾಗದೆ ನಿರ್ಭೀತಿ ಯಿಂದ ಮತ ಚಲಾಯಿಸುವಂತೆ ಜಾಗೃತಿ ಮೂಡಿಸುವುದು ಸ್ವೀಪ್ ಸಮಿತಿ ಯ ಮುಖ್ಯ ಧ್ಯೇಯವಾಗಿದೆ. ಪ್ರತಿಯೊಬ್ಬ ಅಧಿಕಾರಿಗಳು ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು.

ಬೇರೆ ಬೇರೆ ಕಡೆಗಳಿಂದ ಕೆಲಸ ಅರಸಿ ಜಿಲ್ಲೆಗೆ ವಲಸೆ ಬಂದಿರುವ ಕೂಲಿ ಕಾರ್ಮಿಕರುಗಳ ಮನವೊಲಿಸಿ, ಅವರ ಕ್ಷೇತ್ರ ವ್ಯಾಪ್ತಿಯಲ್ಲಿಯೇ ಕಡ್ಡಾಯ ವಾಗಿ ಮತದಾನದ ದಿನದಂದು ಮತ ಚಲಾಯಿಸಲು ಅವರಿಗೆ ಅರಿವು ಮೂಡಿಸಬೇಕು ಎಂದರು.

ಮತದಾನಕ್ಕಾಗಿ ಮತದಾರ ಮತದಾನ ಕೇಂದ್ರಗಳಿಗೆ ಬಂದಾಗ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ವಿಶೇಷ ಗಮನ ಹರಿಸಬೇಕು ಎಂದ ಬಾಯಲ್, ಬಿಎಲ್‌ಓಗಳು ಪ್ರತಿಯೊಬ್ಬ ಮತದಾರರಿಗೂ ಮತದಾನ ಮಾಡಲು ಅನುಕೂಲವಾಗುವ ರೀತಿಯಲ್ಲಿ ಮತದಾನ ಕ್ರಮ ಸಂಖ್ಯೆಯ ಚೀಟಿಯನ್ನು ಮನೆಮನೆಗೂ ವಿತರಿಸಬೇಕು. ಜೊತೆಗೆ ಮತದಾನ ಯಂತ್ರದ ಬಳಕೆಯ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಮತದಾನ ಕಡಿಮೆಯಾಗಲು ಕಾರಣಗಳನ್ನು ಗುರುತಿಸುವು ದರೊಂದಿಗೆ ಮತದಾನ ಪ್ರಮಾಣ ಹೆಚ್ಚಿಸಲು ಹೆಚ್ಚು ಜಾಗೃತಿ ಕಾರ್ಯಕ್ರಮ ಗಳನ್ನು ಆಯೋಜಿಸಿ ಮತ ಚಲಾಯಿಸುವವರ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಪಂ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಯೋಜನಾ ನಿರ್ದೇಶಕ ಕರೀಂ ಆಸಾದಿ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News