ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ: ಉಡುಪಿ ಜಿಲ್ಲಾಧಿಕಾರಿ

Update: 2024-09-17 14:05 GMT

ಉಡುಪಿ, ಸೆ.17: ಉಡುಪಿ ನಗರಸಭೆ ವತಿಯಿಂದ ‘ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ’ ಎಂಬ ಧ್ಯೇಯ ವಾಕ್ಯದಲ್ಲಿ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ-2024’ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು.

ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ 15 ದಿನಗಳ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಬಳಿಕ ಮಾತನಾಡಿದ ಅವರು, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನಮ್ಮ ಪರಿಸರ ಸ್ವಚ್ಛವಾಗಿದ್ದಾಗ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳಲು ಸಾಧ್ಯ ವಾಗುತ್ತದೆ. ಪ್ರತಿಯೊಬ್ಬರು ತಮ್ಮ ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟು ಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ ಹಾಗೂ ಶಾಲೆಯ ಪರಿಸರ ವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು. ಸ್ವಚ್ಛತೆ ಎನ್ನುವುದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ದಿನನಿತ್ಯ ನಿರಂತರವಾಗಿ ಬದುಕಿನಲ್ಲಿ ಅಳವಡಿಸಿ ಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ ಕೆ.ಎಸ್ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವದ ಪ್ರಮಾಣ ವಚನವನ್ನು ಬೋಧಿಸಿದರು. ಬಳಿಕ ವಿದ್ಯಾರ್ಥಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು, ನಗರಸಭೆಯ ಸದಸ್ಯರು, ಭಜನಾ ಮಂದಿರದ ಪ್ರಮುಖರು ಶ್ರಮದಾನ ಮಾಡಿ ಸುತ್ತಮುತ್ತ ಪರಿಸರವನ್ನು ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾಧಿಕಾರಿ ಉದಯ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ ರಾಜು, ಪೌರಾಯುಕ್ತ ರಾಯಪ್ಪ, ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮಲ್ಪೆ ಅಭಿವೃದ್ಧಿ ಸಮಿತಿಯ ಸಂತೋಷ್ ಪೈ, ಹನುಮಾನ್ ವಿಠೋಭ ಭಜನಾ ಮಂದಿರದ ಅಧ್ಯಕ್ಷ ಸತೀಶ್ ಬಂಗೇರ, ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷ ಪಾಂಡುರಂಗ ಮಲ್ಪೆ, ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಧನಂಜಯ, ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ಲಕ್ಷ್ಮೀ ಮಂಜುನಾಥ, ಸ್ವಚ್ಛತಾ ರಾಯಭಾರಿ ಜೋಸೆಫ್ ರುಬೆಲ್ಲೋ, ನಗರ ಸಭೆಯ ಆರೋಗ್ಯ ನಿರೀಕ್ಷಕರಾದ ಮನೋಹರ, ಹರೀಶ್ ಬಿಲ್ಲವ, ನಗರಸಭೆಯ ಸೂಪರ್‌ವೈಸರ್‌ಗಳು, ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.




 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News