ಸ್ವಚ್ಛತೆ ಎಲ್ಲರ ಮೊದಲ ಆದ್ಯತೆಯಾಗಲಿ: ಉಡುಪಿ ಜಿಲ್ಲಾಧಿಕಾರಿ

Update: 2024-09-21 15:20 GMT

ಉಡುಪಿ, ಸೆ.21: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆ ತೊಂದರೆಯಾಗುತ್ತಿದೆ.ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಶನಿವಾರ ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರ್‌ರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗ ವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನದಂದು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಸಾರ್ವಜನಿಕರು ನಿರುಪಯುಕ್ತ ಪ್ಲಾಸ್ಟಿಕ್ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೀದಿ ಬದಿ ಎಸೆಯುವುದರಿಂದ ಪರಿಸರ ಮಾಲಿನ್ಯ ಆಗುವುದಲ್ಲದೇ, ಅವುಗಳು ಸಮುದ್ರ ತಲುಪಿ ಜಲಚರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಗಳ ನಿರ್ದೇಶನದಂತೆ 2 ವಾರಗಳ ಕಾಲ ಕಡಲ ತೀರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಧ್ಯೇಯ ವಾಕ್ಯವನ್ನು ಬೋಧಿಸಲಾಯಿತು. ನಂತರ ಕೋಡಿ ಕಡಲತೀರದಲ್ಲಿರುವ ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಚ ಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಪ್ರತಿನಿಧಿ ಅಮೃತಾ ಗುಪ್ತಾ, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ರಂಗಸ್ವಾಮಿ, ಸಾಮಾಜಿಕ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ರವೀಂದ್ರನಾಥ್ ಹಾಗೂ ಕುಂದಾಪುರ ಪುರಸಭೆಯ ಕಾರ್ಯ ನಿರ್ವಹಣಾಧಿಕಾರಿ ಆನಂದ, ಕುಂದಾಪುರ ಪುರಸಭೆಯ ಅಧಿಕಾರಿಗಳು, ಸ್ವಚ್ಚತಾ ಸಿಬ್ಬಂದಿ, ಅರಣ್ಯ ಇಲಾಖೆ, ಪರಿಸರ ಇಲಾಖೆ ಹಾಗೂ ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.








 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News