ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹ: ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿಧಿಷ್ಠಾವಧಿ ಮುಷ್ಕರ

Update: 2024-09-27 13:37 GMT

ಉಡುಪಿ, ಸೆ.27: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ವನ್ನು ಹಮ್ಮಿಕೊಳ್ಳಲಾಗಿದೆ.

ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವು ದರಿಂದ ಹಾಗೂ ಸಿ ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿ ಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು. ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಸೇವಾ ವಿಷಯ ಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡು ವಂತೆ ಸೂಕ್ತ ಆದೇಶ ನೀಡಬೇಕು. ದಫ್ತರ್ ಹಾಗೂ ಜಮಾಬಂದಿಯನ್ನು ರದ್ದು ಪಡಿಸಬೇಕು. ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ಹೊರಡಿಸ ಬೇಕು. ಹಾಲಿ ಇರುವ ರ್ಯಾಂಕಿಂಗ್ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಣೆ ಮಾಡ ಬೇಕು. ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಧರಣಿಯಲ್ಲಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಭರತ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಎಸ್., ಉಡುಪಿ ತಾಲೂಕು ಅಧ್ಯಕ್ಷ ಕಾರ್ತಿಕೇಯ ಭಟ್, ಕಾಪು ತಾಲೂಕು ಅಧ್ಯಕ್ಷ ಡೆನಿಯಲ್ ಡೋಮಿನಿಕ್ ಡಿಸೋಜ, ಬ್ರಹ್ಮಾವರ ಅಧ್ಯಕ್ಷ ರಾಘವೇಂದ್ರ ಡಿ.ಸಿ., ಕುಂದಾಪುರ ಅಧ್ಯಕ್ಷ ಶಿವರಾಯ, ಬೈಂದೂರು ಅಧ್ಯಕ್ಷ ಗಣೇಶ್ ಮೇಸ್ತ, ಕಾರ್ಕಳ ಅಧ್ಯಕ್ಷ ಪ್ರಶಾಂತ್, ಹೆಬ್ರಿ ಅಧ್ಯಕ್ಷ ಗಣೇಶ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

ಸೆ.30ರಿಂದ ಮತ್ತೆ ಮುಂದುವರಿಕೆ

ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಮುಷ್ಕರ ನಡೆಸಲಾಗಿದ್ದು, ಸೆ.28 ಮತ್ತು 29ರಂದು ರಜೆಯ ಕಾರಣ ಸೆ.30ರಿಂದ ಮತ್ತೆ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ಮುಂದುವರೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಭರತ್ ಶೆಟ್ಟಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಸೆ.21ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಷನ್ ಕಾರ್ಯಗಳನ್ನು ಸ್ಥಗಿತ ಗೊಳಿಸಿದ್ದು, ಸೆ.26ರಿಂದ ಕರ್ತವ್ಯಕ್ಕೂ ಹೋಗದೆ ಮುಷ್ಕರ ನಡೆಸುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆ ಮಾಡುವವರಿಗೆ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News