ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು ಪ್ರತಿಯೊಬ್ಬರು ಶ್ರಮಿಸಿ: ಉಡುಪಿ ಜಿಲ್ಲಾಧಿಕಾರಿ

Update: 2024-10-07 15:55 GMT

ಉಡುಪಿ: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ ಮಾತೃಭಾಷೆಯ ಮಹತ್ವದ ಕುರಿತು ಮನ ದಟ್ಟು ಮಾಡುವ ಮೂಲಕ ಕನ್ನಡವನ್ನು ನಮ್ಮ ಉಸಿರಾಗಿಸುವ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ-ಬೆಳೆಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ಸಂಭ್ರಮ- ೫೦ರ ಅಂಗವಾಗಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಜಿಲ್ಲೆಯಲ್ಲಿ ಸ್ವಾಗತ ಕೋರಿ, ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕರ್ನಾಟಕ ಸಂಭ್ರಮ-50 ಅನ್ನು ಆಚರಿಸುತ್ತಿದ್ದು, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯ ಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಮನೆಯಲ್ಲಿ ಮಾತೃ ಭಾಷೆ ಯಾದ ಕನ್ನಡವನ್ನು ಮಾತನಾಡುವುದರೊಂದಿಗೆ, ಮಕ್ಕಳು ಕನ್ನಡ ಪುಸಕ್ತಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳು ವಂತೆ ಪ್ರೇರೇಪಿಸಬೇಕು. ಕನ್ನಡ ಮಾತೃ ಭಾಷೆಯನ್ನು ಕಲಿಕಾ ಮಾಧ್ಯಮವಾಗಿಸಿದಾಗ ಮಾತ್ರವೇ ಕನ್ನಡ ಜ್ಯೋತಿ ರಥಯಾತ್ರೆಗೆ ಸಾರ್ಥಕತೆ ದೊರೆಯುತ್ತದೆ ಎಂದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆನಂದ್ ಕುಂದರ್ ಮಾತನಾಡಿ, ಕನ್ನಡ ಸಾಹಿತ್ಯವನ್ನು, ಕನ್ನಡ ಶಾಲೆ ಗಳನ್ನು ಉಳಿಸುವ ಕಾರ್ಯ ವಾಗಬೇಕು. ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುವುದ ರೊಂದಿಗೆ ಯುವಜನತೆಯಲ್ಲಿ ಕನ್ನಡ ಕಲಿಯುವಿಕೆಯ ಕುರಿತ ಆಸಕ್ತಿಯನ್ನು ಹೆಚ್ಚಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಎಎಸ್‌ಪಿ ಸಿದ್ದಲಿಂಗಪ್ಪ ಟಿ, ಪೌರಾಯುಕ್ತ ರಾಯಪ್ಪ, ಡಿಡಿಪಿಐ ಗಣಪತಿ ಕೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕನ್ನಡ ಪರ ಘೋಷಣೆಗಳನ್ನು ಕೂಗುವುದರೊಂದಿಗೆ ಮೆರವಣಿಗೆ ಮುಂದಕ್ಕೆ ಸಾಗಿತು.

ರಥಯಾತ್ರೆಯೊಂದಿಗೆ ಇದ್ದ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಆಕರ್ಷಕ ಮೆರುಗು ನೀಡಿದವು.





Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News