ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

Update: 2024-11-06 14:10 GMT

ಉಡುಪಿ, ನ.6: ಕನ್ನಡನಾಡು, ನುಡಿಯ ಕುರಿತು ಅಭಿಮಾನ ಮೂಡಿಸುವ ಉದ್ದೇಶದಿಂದ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಯಾತ್ರೆಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸವನ್ನು ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಗಳಲ್ಲಿ ಒಂದಾಗಿದ್ದು, ಸುಮಾರು 2000ಕ್ಕೂ ಅಧಿಕ ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ನುಡಿಯನ್ನು ಕಟ್ಟುವ, ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಕೈಜೋಡಿ ಸಬೇಕು ಎಂದ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21 ಹಾಗೂ 22ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಜಿಲ್ಲೆಯ ಕನ್ನಡ ಅಭಿಮಾನಿಗಳು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆದಿದ್ದು, ಮುಂಬರುವ ಡಿಸೆಂಬರ್‌ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳ ನವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಭಾಷೆಯ ಸೊಗಡನ್ನು ಎಲ್ಲೆಡೆ ಪಸರಿಸುವ ಜೊತೆಗೆ, ಮಾತೃ ಭಾಷೆಯ ಕುರಿತು ಭಾಷಾಭಿಮಾನವನ್ನು ಬೆಳಸಿಕೊಂಡು ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಬದ್ದರಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಮೆರವಣಿಗೆಯ ಮೂಲಕ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯನ್ನು ಕಾರ್ಕಳ, ಮೂಡಬಿದರೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರೆ, ಕಸಾಪ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ವಂದಿಸಿದರು.


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News