ಪರಿಸರ ಸೂಕ್ಷ್ಮ ವಲಯದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಪೂರ್ವಾನುಮತಿ ಅಗತ್ಯ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-11-16 15:20 GMT

ಉಡುಪಿ: ಸರಕಾರಗಳು ಜಾರಿಗೆ ತರುವ ನೀತಿ ನಿಯಮಗಳು ಹಾಗೂ ಕಾನೂನುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಆದರೂ ಪ್ರಸ್ತುತ ಜಾರಿಯಲ್ಲಿರುವ ಪರಿಸರ ಸೂಕ್ಷ್ಮ ವಲಯದಲ್ಲಿ (ಇಕೋ ಸೆನ್ಸಿಟಿವ್ ಝೋನ್) ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉಸ್ತುವಾರಿ ಸಮಿತಿ (ಮಾನಿಟರಿಂಗ್ ಕಮಿಟಿ)ಯ ಪೂರ್ವಾನುಮತಿ ಪಡೆಯುವುದು ಅವಶ್ಯವಿರುತ್ತದೆ. ಪರಿಸರಕ್ಕೆ ಹಾನಿಯಾಗದೇ ಇರುವ ಬಗ್ಗೆ ಪರಿಶೀಲಿಸಿ, ಸಮಿತಿ ಅನುಮತಿಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಶನಿವಾರ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಚರ್ಚಿಸಲು ಆಯೋಜಿಸಲಾದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ಈಗಾಗಲೇ ನಿರ್ಧರಿಸಿದೆ. ಈ ಬಗ್ಗೆ ಸದ್ಯದ ಪರಿಸ್ಥಿತಿಯಲ್ಲಿ ಜನರಲ್ಲಿ ಆತಂಕ ಬೇಡ ಎಂದು ಭರವಸೆ ನೀಡಿದರು.

ಸರಕಾರದ ಅರಣ್ಯ ಕಾಯ್ದೆಗಳು, ಅರಣ್ಯ ಇಲಾಖೆಯ ನೀತಿ ನಿಯಮ ಗಳಿಂದ ನಿರಂತರ ತೊಂದರೆಗೊಳಗಾಗುತ್ತಿರುವ ಕಾಡಂಚಿನ ಭಾಗದ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಜಾರಿಯಾದರೆ ವಿದ್ಯುತ್, ರಸ್ತೆ, ಸೇತುವೆ, ಕುಡಿಯುವ ನೀರು, ಜನವಸತಿ ಪ್ರದೇಶ, ಮನೆಗಳ ನಿರ್ಮಾಣ ಸೇರಿದಂತೆ ವಿವಿಧ ಮೂಲ ಸೌಕರ್ಯಗಳಿಗೆ ಕುತ್ತು ಬಂದು ಭವಿಷ್ಯದಲ್ಲಿ ಜನರ ಜೀವನೋಪಾಯಕ್ಕೆ ಅನಾನುಕೂಲ ಉಂಟಾಗಬಹುದೆಂಬ ಆತಂಕ ಕಾಡುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಭಾಗವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಬಗ್ಗೆ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ ಎಂದರು.

ಪ್ರಸ್ತುತ ಜಾರಿಯಲ್ಲಿರುವ ಪರಿಸರ ಸೂಕ್ಷ್ಮ ವಲಯದಿಂದ ಕಾಡಂಚಿನ ಸುರಕ್ಷಿತ ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅಭಯಾರಣ್ಯ ಪ್ರದೇಶ ವ್ಯಾಪ್ತಿಯಿಂದ ಒಂದು ಕಿ.ಮೀ. ವ್ಯಾಪ್ತಿಯ ಬಫರ್ ಝೋನ್‌ಗಳಲ್ಲಿ ಜನರು ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಳ್ಳಲು ಇಕೋ ಸೆನ್ಸಿಟೀವ್ ಝೋನ್‌ನ ಮಾನಿಟರಿಂಗ್ ಕಮಿಟಿಯ ಪೂರ್ವಾನು ಮತಿ ಪಡೆಯುವುದು ಅವಶ್ಯಕತೆ ಇದೆ. ಇದರಿಂದ ಜನರ ದೈನಂದಿನ ಜೀವನಗಳ ಆಗು-ಹೋಗುಗಳಿಗೆ ತೊಂದರೆ ಉಂಟಾಗುತ್ತಿದೆ. ಇದನ್ನು ಸ್ಥಳೀಯವಾಗಿ ಅನುಮತಿ ನೀಡುವ ಕೆಲವೊಂದು ತಿದ್ದುಪಡಿಗಳು ಆಗಬೇಕಿದೆ ಎಂದರು.

ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ಸರಕಾರಗಳು ಜಾರಿಗೆ ತರುವ ಕಾನೂನುಗಳಿಂದ ಜನಸಾಮಾನ್ಯರ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತ್ತಿವೆ. ಇವುಗಳನ್ನು ಜಾರಿಗೆ ತರುವ ಮುನ್ನ ಜನರ ಆಕ್ಷೇಪಣೆಗಳ ಬಗ್ಗೆಯೂ ಆಲಿಸಿ, ಸಾಧಕ-ಬಾಧಕಗಳನ್ನು ಪರಾಮರ್ಶಿಸಿ, ಜಾರಿಗೆ ತರಬೇಕು ಎಂದರು.

ಇಕೋ-ಸೆನ್ಸಿಟಿವ್ ಝೋನ್ ವ್ಯಾಪ್ತಿಯ ಒಂದು ಕಿ.ಮೀ. ಬಫರ್ ಝೋನ್ ಪ್ರದೇಶವು ಯಾವ-ಯಾವ ಗ್ರಾಮಗಳಲ್ಲಿ, ಯಾವ ಯಾವ ಸರ್ವೇ ನಂಬರ್ ಒಳಗೊಂಡಿವೆ ಎಂಬುದರ ಬಗ್ಗೆ ನಿಖರ ಮಾಹಿತಿಯನ್ನು ಜನರಿಗೆ ತಿಳಿಸಬೇಕು. ಆದರೆ ಪ್ರಸ್ತುತ ಈ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಕಂದಾಯ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೆಯನ್ನು ಮಾಡಿ, ಇದರ ಗಡಿಯನ್ನು ಗುರುತಿಸಬೇಕಿದೆ ಎಂದರು.

ಬೈಂದೂರು ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಮಾತನಾಡಿ, ಯಾವುದೇ ವರದಿಯನ್ನು ಜಾರಿಗೆ ತರುವ ಮುನ್ನ ಜನರಿಗೆ ಆಗುವ ತೊಂದರೆಗಳು, ಅನುಕೂಲಗಳು ಹಾಗೂ ಸಿಗುವ ಸೌಲಭ್ಯಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು. ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗಿರುವುದರಿಂದ ಕಾಡಂಚಿನ ಜನರಿಗೆ ಉಂಟಾಗುವ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರಕ್ಕೆ ಅಥವಾ ವರದಿ ಜಾರಿ ಮಾಡಲು ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ಕಾರ್ಯವನ್ನು ಅವರು ತಪ್ಪದೇ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇಓಗಳು, ಅಧಿಸೂಚಿತ ಗ್ರಾಪಂಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

‘6 ಬಾರಿ ಅಧಿಸೂಚನೆ ತಿರಸ್ಕಾರ’

ಕೇಂದ್ರ ಸರಕಾರ ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ, ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಈಗಾಗಲೇ 6 ಬಾರಿ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ಈವರೆಗೂ ಅದು ಜಾರಿಗೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಜಾರಿ ಮಾಡಲು ಮುಂದಾಗಬಹುದು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತದೆ. ಸ್ಥಳೀಯವಾಗಿ ವಾಸಿಸುವ ಜನರ ಆಕ್ಷೇಪಣೆಗಳು, ಅವರಿಗೆ ಆಗುವ ಅನಾನುಕೂಲಗಳನ್ನು ಮೇಲ್ಮಟ್ಟದಲ್ಲಿ ತಿಳಿಸುವ ಕಾರ್ಯ ವನ್ನು ಅಧಿಕಾರಿಗಳು ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News