ವಿಕಲಚೇತನರ ದಿನಾಚರಣೆಗೆ ಸಿದ್ಧತೆ; ಉಡುಪಿ ಅಪರ ಜಿಲ್ಲಾಧಿಕಾರಿ ಸೂಚನೆ
ಉಡುಪಿ: ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿ.3ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾಮಟ್ಟದಲ್ಲಿ ಡಿ.3ರಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಎಂಬ ಘೋಷವಾಕ್ಯ ದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಮಕ್ಕಳನ್ನು ಹಾಗೂ ವ್ಯಕ್ತಿಗಳನ್ನು ಗೌರವಿಸಿ, ಸನ್ಮಾನಿಸಲಾಗುವುದು ಹಾಗೂ ವಿಕಲಚೇತನರಿಗಾಗಿ ಆಯೋಜಿಸಲಾದ ಕ್ರೀಡಾ ಮತ್ತು ಸಾಂಸ್ಕೃ ತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದರು.
ಜಿಲ್ಲಾ ಮಟ್ಟದಲ್ಲಿ ವಿಕಲಚೇತನರ ಕ್ರೀಡಾ ಸ್ಪರ್ಧೆಗಳನ್ನು ನವೆಂಬರ್ 30ರ ಒಳಗಾಗಿ ಆಯೋಜಿಸಿ, ಸ್ಪರ್ಧಾ ವಿಜೇತರ ವಿವರಗಳನ್ನು ನೀಡಬೇಕು ಎಂದ ಅವರು, ನ.25ರಿಂದ ಡಿ.1ರವರೆಗೆ 21 ಬಗೆಯ ಅಂಗವಿಕಲತೆ ಬಗ್ಗೆ ಅರಿವು ಮೂಡಿ ಸಲು ಜಿಲ್ಲಾ ಡಿಡಿಆರ್ಸಿ ಕೇಂದ್ರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆ ಹಾಗೂ ಎಂಆರ್ಡಬ್ಲ್ಯೂ ಸಹಯೋಗದೊಂದಿಗೆ ವಿಕಲಚೇತನರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಈ ವೇಳೆ ವಿಶೇಷಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವಲ್ಲಿ ವಿಶೇಷ ಕ್ರಮ ವಸಬೇಕು ಎಂದರು.
ವಿಕಲಚೇತನರ ದಿನಾಚರಣೆಯ ದಿನದಂದು ಬೆಳಗ್ಗೆ 9 ರಿಂದ ವಿಶೇಷ ಶಾಲಾಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತು ಗಳ ಪ್ರದರ್ಶನ ನಡೆಯಲಿದೆ. ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ಸಹ ಆಯೋಜಿಸ ಬೇಕು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ವಿಶೇಷಚೇತನರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ವ್ಯಾಪಕ ಪ್ರಚಾರ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಜೈ ವಿಠ್ಠಲ, ವಿ.ಹಿ.ನಾ.ಸ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.