ಆರೋಗ್ಯ ದೃಷ್ಟಿಯಿಂದ ಸುರಕ್ಷತಾ ಉಪಕರಣ ಧರಿಸಿ ಕೆಲಸ ನಿರ್ವಹಿಸಿ: ಪೌರಕಾರ್ಮಿಕರಿಗೆ ಉಡುಪಿ ಡಿಸಿ ಕಿವಿಮಾತು

Update: 2024-11-26 14:14 GMT

ಉಡುಪಿ: ನಗರದ ಸ್ವಚ್ಛತೆಗೆ ಪ್ರಮುಖ ಕಾರಣೀಭೂತರು ಪೌರ ಕಾರ್ಮಿಕರು. ನಗರದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ಆರೋಗ್ಯ ಕೂಡ ಉತ್ತಮವಾಗಿರಬೇಕು. ತಮಮ ಆರೋಗ್ಯದ ದೃಷ್ಟಿಯಿಂದ ಸುರಕ್ಷತಾ ಪರಿಕರ, ಉಪಕರಣ ಗಳನ್ನು ಧರಿಸಿ ಎಲ್ಲರೂ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪೌರಕಾರ್ಮಿಕರಿಗೆ ಕಿವಿ ಮಾತು ಹೇಳಿದ್ದಾರೆ.

ನಗರಸಭೆ ವತಿಯಿಂದ ಮಂಗಳವಾರ ನಗರದ ಅಜ್ಜರಕಾಡಿನ ಪುರಭವನ ದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಪೌರಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ವತಿಯಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಯನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬ ಪೌರನೌಕರರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ನಿಮ್ಮ ಸವಲ ತ್ತುಗಳನ್ನು ಕೇಳಿ ಪಡೆದುಕೊಳ್ಳುವ ಹಕ್ಕು ನಿಮಗಿದೆ. ಪೌರಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವ ಪೌರ ಕಾರ್ಮಿಕರು ತಮ್ಮ ಹಕ್ಕನ್ನು ಪಡೆಯುವ ಸಂದರ್ಭದಲ್ಲಿ ಯಾವುದಾ ದರೂ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಯಶಪಾಲ್ ಎ. ಸುವರ್ಣ, ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣ ಜಿಲ್ಲೆಯ ಪೌರಕಾರ್ಮಿಕರು.ಅವರು ತಮ್ಮ ಕರ್ತವ್ಯವನ್ನು ಅರಿತು ನಗರದ ಸ್ವಚ್ಛತೆಗೆ ಅಮೂಲ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದರು.

ಪೌರಕಾರ್ಮಿಕರು ಉಡುಪಿಯ ಆಸ್ತಿ. ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಮನೆ ನಿರ್ಮಾಣ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಸವಲತ್ತುಗಳನ್ನು ತಲುಪಿಸಲು ನಗರಸಭೆ ಗರಿಷ್ಠ ಮಟ್ಟದ ಸಹಕಾರ ನೀಡುತಿದ್ದು, ಮುಂದಿನ ದಿನಗಳಲ್ಲೂ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು.

ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂವಿಧಾನ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಲಾದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ ಉತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ನಗರಸಭೆ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯಾದ್ಯಕ್ಷ ಕೆ. ಪ್ರಭಾಕರ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಉಡುಪಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾಆರ್ ನಾಯಕ್, ನಗರಸಭಾ ಸದಸ್ಯರು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ನಗರಸಭೆಯ ಪೌರಾಯುಕ್ತ ಡಾ.ಉದಯ್ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು. ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ ಕೆ.ಎಸ್ ವಂದಿಸಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಉಡುಪಿ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪೌರಕಾರ್ಮಿಕರ ಪುರ ಮೆರವಣಿಗೆ ನಡೆಯಿತು.






Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News