ಕಾರ್ಕಳ: ಚಾರ ಬಸದಿಯ ಸ್ವಚ್ಛತಾ ಕಾರ್ಯಕ್ರಮ
ಉಡುಪಿ, ನ.27: ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕ, ಪ್ರೌಚ್ಯ ತೌಳವ ಕರ್ಣಾಟ ಕುಕ್ಕೆ ಶ್ರೀನಿಕೇತನ ಸಂಗ್ರಹಾಲಯ, ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಮೂಡಬಿದರೆ, ಜೈನ ಮಠ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ತಾಲೂಕು ಚಾರದ ಪ್ರಾಚೀನ ಐತಿಹಾಸಿಕ ಬಸದಿಯ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಮೂಡಬಿದರೆ ಜೈನ ಮಠದ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ಅವರು ಬಸದಿ ಸ್ವಚ್ಛತಾ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಉಡುಪಿ ಜಿಲೆಯಲ್ಲಿ ಐತಿಹಾಸಿಕ ಸ್ಥಳಗಳನ್ನು ರಕ್ಷಣೆ ಮಾಡುವ ಬಗ್ಗೆ ಅರಿವು ಮೂಡಿ ಸಲು ಇಂತಹ ಕಾರ್ಯಕ್ರಮ ಅಗತ್ಯ. ಸಾವಿರಾರು ವರ್ಷಗಳ ಇತಿಹಾಸ ಇರುವ ಇಂತಹ ಪ್ರಾಚೀನ ಕೇಂದ್ರಗಳ ಬಗ್ಗೆ ಅರಿವು ಮೂಡಿಸುವುದೇ ನಿಜವಾದ ಸಂಸ್ಕೃತಿಯ ರಕ್ಷಣೆ ಎಂದರು.
ಕುಕ್ಕೆ ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠದ ನಿರ್ದೇಶಕ ಡಾ.ಜಿ.ವಿ. ಕಲ್ಲಾಪುರೆ, ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕ ಎಸ್. ಎ. ಕೃಷ್ಣಯ್ಯ, ಡಾ. ಗಣೇಶ ಪ್ರಸಾದ್ ನಾಯಕ್, ಪುನೀತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಪ್ರಾಂಶುಪಾಲ ಡಾ. ವಿದ್ಯಾಧರ ಶೆಟ್ಟಿ. ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಬಾಲರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠದ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿನ ರೆಡ್‌ಕ್ರಾಸ್, ಎನ್ನೆಸ್ಸೆಸ್ ಮತ್ತು ರೋವರ್ಸ್ ರೇಂಜರ್ಸ್ ವಿದ್ಯಾರ್ಥಿ ಗಳೊಂದಿಗೆ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.