ಉಡುಪಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ: ಡಿಎಆರ್ ಚಾಂಪಿಯನ್
ಉಡುಪಿ, ನ.27: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ(ಡಿಎಆರ್) ತಂಡ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಬುಧವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪುರುಷರ ವಿಭಾಗದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಯೋಗೀಶ್ ಹಾಗೂ ಮಹಿಳಾ ವಿಭಾಗದಲ್ಲಿ ಬ್ರಹ್ಮಾವರದ ನಾಗಶ್ರೀ ಪಡೆದುಕೊಂಡರು.
ಮುಖ್ಯ ಅತಿಥಿಯಾಗಿ ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಮಾತನಾಡಿ, ಪೊಲೀಸರು ದಿನದ 24ಗಂಟೆಗಳ ಕಾಲವೂ ಕೆಲಸ ಮಾಡ ಬೇಕಾಗಿದೆ. ಆದುದರಿಂದ ತಮ್ಮ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸ ಬೇಕಾದ ಅಗತ್ಯ ಇದೆ. ಅದಕ್ಕಾಗಿ ದಿನದಲ್ಲಿ ಒಂದು ಗಂಟೆಯನ್ನು ಆರೋಗ್ಯಕ್ಕಾಗಿ ಮೀಸಲಿರಿಸಬೇಕು. ವ್ಯಾಯಾಮ, ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು. ಇದರಿಂದ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್., ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಿ.ಎ.ಹೆಗಡೆ ವಂದಿಸಿದರು. ಡಿಎಆರ್ ಸಿಬ್ಬಂದಿ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.