ಉಡುಪಿ| ಗ್ರಾಪಂ ಚುನಾವಣೆ: ನಿಷೇಧಾಜ್ಞೆ

Update: 2024-11-30 12:59 GMT

ಉಡುಪಿ: 2025ರ ಜನವರಿ ತಿಂಗಳೊಳಗೆ ಅವಧಿ ಮುಕ್ತಾಯ ಗೊಳ್ಳಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ನ 33 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಆಯೋಗದ ನಿರ್ದೇಶನದಂತೆ ಡಿಸೆಂಬರ್ 8ರಂದು ಮತದಾನ ನಡೆಯಲಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಡಿ.6ರ ಬೆಳಗ್ಗೆ 6:00 ಗಂಟೆಯಿಂದ ಡಿ.8ರಂದು ಮತದಾನ ಪ್ರಕ್ರಿಯೆ ಮುಕ್ತಾಯ ವಾಗುವವರೆಗೆ ಚುನಾವಣೆ ನಡೆಯಲಿರುವ ಗ್ರಾಪಂ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತದಾನ ಕೇಂದ್ರಗಳ ಸುತ್ತಮುತ್ತ 100ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ ಹಾಗೂ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News