ವಾಲಿಬಾಲ್ ತಂಡದಿಂದ ವಿದ್ಯಾರ್ಥಿಗಳನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ದಸಂಸ ಪ್ರತಿಭಟನೆ
ಉಡುಪಿ, ಡಿ.22: ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಕೂಟಕ್ಕಾಗಿ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ಮತ್ತು ಅಲ್ಪಸಂಖ್ಯಾತ ಇಬ್ಬರು ವಿದ್ಯಾರ್ಥಿಗಳನ್ನ್ನು ಜಿಲ್ಲಾಧಿಕಾರಿಯವರ ಶಿಫಾರಸ್ಸಿನಂತೆ ಕೈಬಿಡ ಲಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಮಾತನಾಡಿ, ಜಿಲ್ಲಾಧಿಕಾರಿ ರಾಜಕೀಯ ಒತ್ತಡದಿಂದ ಸಭೆ ನಡೆಸಿ ಆಯ್ಕೆ ಪಟ್ಟಿಯನ್ನು ಬದಲಾವಣೆ ಮಾಡಿದ್ದಾರೆ. ಜಿಲ್ಲೆಯ ಆಡಳಿತ ನಡೆಸುವ ಜಿಲ್ಲಾಧಿಕಾರಿಯು ವ್ಯಾಪ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಪಟ್ಟಿ ಬದಲಾವಣೆ ಕುರಿತು ಸೂಕ್ತವಾದ ಕಾರಣ ತಿಳಿಸಬೇಕು. ಇಲ್ಲದಿದ್ದರೆ ಮುಂದೆ ತೀವ್ರ ಹೋರಾಟ ನಡೆಸಲಾಗು ವುದು ಎಂದು ಎಚ್ಚರಿಕೆ ನೀಡಿದರು.
ದಸಂಸ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ್ ಗಿಳಿಯಾರ್, ಹಿರಿಯ ಚಿಂತಕ ಪ್ರೊ.ಫಣಿರಾಜ್, ಹೋರಾಟ ಗಾರ ಹುಸೇನ್ ಕೋಡಿಬೆಂಗ್ರೆ ಮಾತನಾಡಿದರು. ಈ ಸಂದರ್ಭ ದಸಂಸ ಮುಖಂಡರಾದ ಶ್ಯಾಮ್‌ರಾಜ್ ಬಿರ್ತಿ, ಮಂಜುನಾಥ್ ಬಾಳ್ಕುದ್ರು ಮೊದಲಾದವರು ಉಪಸ್ಥಿತರಿದ್ದರು.