ಜಕಣಾಚಾರಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಜ.1: ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಒಬ್ಬ ಧೀಮಂತ ವ್ಯಕ್ತಿಯಾಗಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಗಳ ಶಿಲ್ಪಕಲೆ ಈ ಕ್ಷೇತ್ರಕ್ಕೆ ಅವರ ಕೊಡುಗೆಯ ದ್ಯೋತಕವಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಭಾಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಜಕಣಾಚಾರಿ ಅವರ ಮಗ ಡಂಕಣಾಚಾರಿ ಕೂಡ ಶಿಲ್ಪಕಲೆಗೆ ಹೆಚ್ಚಿನ ಒತ್ತು ನೀಡಿದ್ದರು. ರಾಜ್ಯದ ಶಿಲ್ಪಕಲೆ ಕ್ಷೇತ್ರದಲ್ಲಿ ಜಕಣಾಚಾರಿ ಬಿಟ್ಟರೆ ಬೇರೆ ಯಾವ ಶಿಲ್ಪಿಯೂ ಅವರನ್ನು ಮೀರಿಸಿದವರಿಲ್ಲ. ರಾಜ್ಯ ಸರಕಾರ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಕನ್ನಡ ಶಿಲ್ಪಕಲೆಗೆ ಜಕಣಾಚಾರಿ ನೀಡಿದ ಕೊಡುಗೆ ಬಹುಮುಖ್ಯವಾ ಗಿದೆ. ಕೈದಾಳ ದೇವಾಲಯ ದ ಶಿಲ್ಪಕಲೆ ಅದ್ಭುತವಾಗಿದ್ದು, ಅವರು ಕೊಟ್ಟಿರುವ ಕೊಡುಗೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿ.ಎ.ಆಚಾರ್ಯ ಹಾಗೂ ಕಸಾಪದ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರೂ ಮಾತನಾಡಿ ದರು.ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ, ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕಿ ಪೂರ್ಣಿಮಾ ಸ್ವಾಗತಿಸಿ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ವೆಂಕಟೇಶ ಆಚಾರ್ಯ ವಂದಿಸಿದರು.