‘ಪ್ರತಿಭಾ ಕಾರಂಜಿ’ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ: ಡಿಸಿ ವಿದ್ಯಾಕುಮಾರಿ
ಉಡುಪಿ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಪ್ರತಿಭೆ ಹಾಗೂ ಸಾಮರ್ಥ್ಯ ಅಡಗಿರುತ್ತದೆ. ಅದನ್ನು ಗುರುತಿಸಿ, ನೀರೆರೆದು ಪೋಷಿಸಿದಾಗ ಮಾತ್ರ ಅದು ಬೆಳಕಿಗೆ ಬರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಇವರ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಪ್ರತಿಭೆಯ ಪ್ರದರ್ಶನಕ್ಕೊಂದು ವೇದಿಕೆಯಾಗಿದೆ. ಅವರ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿದಾಗ ಮಾತ್ರ ಆ ಮಗು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಅದು ಬೆಳಗುವಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರ ಪ್ರತೀ ವರ್ಷ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಪ್ರತಿಭೆ ಹೊಂದಿರುವ ಎಲ್ಲಾ ಮಕ್ಕಳಿಗೂ ಸೂಕ್ತ ವೇದಿಕೆ ದೊರಕುವಂತಾಗಬೇಕು ಎಂದರು.
ವಿದ್ಯಾರ್ಥಿಗಳು ಶಾಲಾ ಹಂತದಿಂದ ಕ್ಲಸ್ಟರ್, ತಾಲೂಕು ಮಟ್ಟದವರೆಗೂ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ, ಇಂದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ಭಾಗವಹಿಸಲು ಅವಕಾಶ ಪಡೆಯಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡು ವುದು ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ ಎಂದು ಡಾ.ವಿದ್ಯಾಕುಮಾರಿ ಹೇಳಿದರು.
ಮಕ್ಕಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದು ಮಕ್ಕಳಿಗೆ ಪ್ರೇರೇ ಪಣೆ ನೀಡುವುದರೊಂದಿಗೆ ಅವರಲ್ಲಿ ಏಕಾಗ್ರತೆ ಮೂಡಿಸಿ, ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡುತ್ತದೆ. ಪೋಷಕರು ತಮ್ಮ ಮಕ್ಕಳ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜ ದಲ್ಲಿ ಉತ್ತಮ ನಾಗರಿಕನಾಗಿ ಬೆಳೆಯಲು ಶಿಕ್ಷಕರು ಅವಕಾಶ ಮಾಡಿಕೊಡಬೇಕು ಎಂದರು.
ಕೊಕ್ಕರ್ಣೆ ಗ್ರಾಮಪಂಚಾಯತ್ ಅಧ್ಯಕ್ಷ ಜಯಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಭಾನ ಅಂಜಂ, ಶ್ರೀರಾಮ ಅನುದಾ ನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಶಾಂತರಾಜ ಶೆಟ್ಟಿ, ಕುಚ್ಚೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ನವೀನ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಸದಾಶಿವ ಪೂಜಾರಿ, ಶಾಲೆಯ ಸಂಚಾಲಕಿ ಸುಮತಿ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ ಸ್ವಾಗತಿಸಿದರು. ಇದು ವಿದ್ಯಾರ್ಥಿಗಳಿಗೆ ಭಾಷಣ, ಆಶುಭಾಷಣ, ಚರ್ಚೆ, ಕಂಠಪಾಠ, ಭಕ್ತಿಗೀತೆ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು.