ಮಕ್ಕಳ ಕಾಯಿದೆಗಳು ಪರಿಣಾಮಕಾರಿ ಅನುಷ್ಠಾನ ಅಗತ್ಯ: ಡಾ.ತಿಪ್ಪೇಸ್ವಾಮಿ
ಉಡುಪಿ, ಜ.3: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯ ಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಸಹಭಾಗೀದಾರರಿಗೆ ಇಂದು ಉಡುಪಿ ತಾಪಂ ಸಭಾಂಗಣದಲ್ಲಿ ಆಯೋಜಿಸಲಾದ ಪೋಕ್ಸೋ, ಬಾಲ್ಯ ವಿವಾಹ, ಆರ್‌ಟಿಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕುಗಳೊಂದಿಗೆ ಕರ್ತವ್ಯಗಳನ್ನು ನೀಡಿದೆ. ಈ ದೇಶದ ಕಾನೂನುಗಳನ್ನು ಕಾಪಾಡಿಕೊಂಡು ಹೋಗುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪತ್ರೀ ವರ್ಷ ತಿದ್ದುಪಡಿ ಮಾಡಲಾಗುತ್ತದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಹಭಾಗೀದಾರರು ಇದರ ಬಗ್ಗೆ ಅರಿವು ಹೊಂದಿರಬೇಕು. ಅದರೊಂದಿಗೆ ಇಲಾಖೆಗಳ ಜೊತೆ ಸಮನ್ವಯತೆ ಹೊಂದಿ ತಮ್ಮ ವ್ಯಾಪ್ತಿಯಲ್ಲಿ ಮಕ್ಕಳಿಗೆ ಸಂಬಂಧಿಸಿ ದಾಖಲಾದ ಪ್ರಕರಣಗಳನ್ನು ಸೂಕ್ಷ್ಮ ರೀತಿಯಲ್ಲಿ ನಿರ್ವಹಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್ ಪಿ.ಆರ್. ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಪ್ರಬುದ್ಧತೆ ಹೊಂದಿಲ್ಲದೇ ಇದ್ದಾಗ ತನಗೆ ಸಂಬಂಧಿಸಿದ ವಿಚಾರಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಮನೋಶಕ್ತಿ ಅವರಲ್ಲಿ ಇರುವುದಿಲ್ಲ. ಅಂತಹ ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಜಾರಿಯಲ್ಲಿರುವ ಕಾಯಿದೆಗಳ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಹೊಂದಿರಬೇಕು. ಮಕ್ಕಳ ಹಕ್ಕುಗಳಿಗೆ ಸಂಬಅಧಿಸಿದಅತೆ ವಿವಿಧ ಇಲಾಖೆಗಳು, ಆಯೋಗಗಳು ಕೆಲಸ ನಿರ್ವಹಿಸುತ್ತಿದ್ದು, ಕಾಯಿದೆಗಳನ್ನು ಅನು ಷ್ಠಾನ ಮಾಡುವಾಗ ಸೂಕ್ಷ್ಮ5 ರೀತಿಯಲ್ಲಿ ವರ್ತಿಸಬೇಕು ಎಂದರು.
ಅಧ್ಯಕ್ಷತೆಯನ್ನು ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಯುನಿಸೆಫ್‌ನ ಸಿಸ್ಟರ್ ದುಲ್ಸಿನಾ ಕ್ರಾಸ್ತಾ ಮಕ್ಕಳ ರಕ್ಷಣೆಗೆ ಇರುವ ಕಾಯಿದೆಗಳ ಕುರಿತು ಮಾಹಿತಿ ನೀಡಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ., ಉಡುಪಿ ತಾಪಂ ಸಹಾಯಕ ನಿರ್ದೇಶಕಿ ಫರ್ಝಾನ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
‘ಇಂದಿನ ಶಾಲೆಗಳು ಕೇವಲ ಶಿಕ್ಷಣ ಸಂಸ್ಥೆಗಳಲ್ಲದೇ ಅವು ಮಕ್ಕಳಿಗೆ ರಕ್ಷಣೆ ಕೊಡುವ ಸಂಸ್ಥೆಗಳಾಗಿ ರೂಪುಗೊಳ್ಳಬೇಕು. ಮಕ್ಕಳ ರಕ್ಷಣಾ ಅನುಷ್ಠಾನ ನೀತಿಯನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ರಾಜ್ಯದ ಪ್ರತಿಯೊಂದು ಸರಕಾರಿ ಕಟ್ಟಡಗಳಲ್ಲಿ ಪ್ರದರ್ಶಿಸಬೇಕು. ಏಕಪೋಷಕ, ಅನಾಥ ಮಕ್ಕಳು, ತಂದೆ-ತಾಯಿ ನಿರ್ಲಕ್ಷಿತ ಮಕ್ಕಳು, ವಿಕಲಚೇತನ ಮಕ್ಕಳು, ಆರ್ಥಿಕವಾಗಿ ಹಿಂದುಳಿದ ಮಕ್ಕಳೂ ಸೇರಿದಂತೆ ಮತ್ತಿತರ ಸಂಕಷ್ಟ ಕ್ಕೊಳಗಾದ ಮಕ್ಕಳನ್ನು ಗುರುತಿಸಿ, ಅವರುಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕು’
-ಡಾ.ತಿಪ್ಪೇಸ್ವಾಮಿ ಕೆ.ಟಿ., ಸದಸ್ಯರು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ