ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ

Update: 2025-01-16 12:50 GMT

ಉಡುಪಿ, ಜ.16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನದಲ್ಲಿ ಜ.16ರಂದು ಕರೆಯಲಾದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಹಿನ್ನೆಲೆ ಮತ್ತು 2024ನೇ ಸಾಲಿನಲ್ಲಿ ಸಂಘ ಹಮ್ಮಿ ಕೊಂಡಿ ರುವ ನಿರಂತರ ಹಾಗೂ ಅತ್ಯುತ್ತಮ ಕಾರ್ಯ ಚಟುವಟಿಕೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು.

39ನೇ ರಾಜ್ಯ ಸಮ್ಮೇಳನ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ತುಮಕೂರು ಜಿಲ್ಲಾ ಶಾಖೆಯು ಆತಿಥ್ಯದೊಂದಿಗೆ 39ನೇ ರಾಜ್ಯ ಸಮ್ಮೇಳನವನ್ನು ತುಮಕೂರಿನಲ್ಲಿ ಜ.18 ಮತ್ತು 19ರಂದು ಆಯೋಜಿಸಲಾಗಿದೆ ಎಂದು ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದರು.

ಜ.18 ರಂದು ಬೆಳಗ್ಗೆ 8.30ಕ್ಕೆ ಮೆರವಣಿಗೆಗೆ ಗೃಹ ಸಚಿವ ಡಾ.ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಲಿ ದ್ದಾರೆ. ಅಧ್ಯಕ್ಷತೆಯನ್ನು ಸಂಘದ ರಾಜ್ಯ ಅಧ್ಯಕ್ಷ ಟಿ.ವಿ.ಶಿವಾನಂದ ತಗಡೂರು ವಹಿಸಲಿರುವರು. ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News