ಕ್ರೀಡಾ ವಸತಿ ನಿಲಯಗಳ ಪ್ರವೇಶಕ್ಕೆ ವಿಶೇಷ ಆಯ್ಕೆ ಶಿಬಿರ
ಉಡುಪಿ, ಎ.8: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಕ್ರೀಡಾ ವಸತಿ ಶಾಲೆ/ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಮಟ್ಟದ ಅರ್ಹ ಕ್ರೀಡಾ ಪಟುಗಳ ಆಯ್ಕೆಮಾಡಿ ಪ್ರವೇಶ ಕಲ್ಪಿಸಲು ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮರು ಅವಕಾಶ ನೀಡುವ ದೃಷ್ಟಿಯಿಂದ ವಿವಿಧ ಕ್ರೀಡಾ ವಿಭಾಗಗಳಲ್ಲಿ (ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬಾಸ್ಕೆಟ್‌ಬಾಲ್) ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ - ವಿಶೇಷ ಆಯ್ಕೆ ಶಿಬಿರವನ್ನು ಎಪ್ರಿಲ್ 17ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು.
ಆಸಕ್ತರು ನಿಗದಿತ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ದೃಢೀಕರಿಸಿದ ಜನನ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುಉಡುಪಿ ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ: 0820-2521324, ಮೊ.ನಂ: 9845432303ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.