ಉಡುಪಿ : ನ.23ರಿಂದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾವಳಿ

Update: 2023-11-20 16:43 GMT

ಉಡುಪಿ, ನ.20: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾವಳಿ- 2023-24 ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ.23 ರಿಂದ 26ರವರೆಗೆ ನಡೆಯಲಿದೆ.

ಉಡುಪಿ ಪಿಪಿಸಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಮಾತನಾಡಿ, ಈ ನಾಲ್ಕು ದಿನಗಳ ಕ್ರೀಡಾಕೂಟದಲ್ಲಿ ನಾಲ್ಕು ವಲಯಗಳಿಂದ 16 ತಂಡಗಳು, 250 ಕ್ರೀಡಾಪಟುಗಳು, 50 ಕ್ರೀಡಾ ತರಬೇತುದಾರರು, 50 ತಂಡದ ವ್ಯವಸ್ಥಾಪಕರು ಮತ್ತು ತೀರ್ಪುಗಾರರು ಭಾಗವಹಿಸಲಿರುವರು ಎಂದರು.

ದೇಶದ ಒಟ್ಟು 460 ವಲಯಗಳಿಂದ ಆಯ್ಕೆಗೊಂಡ ಬಲಾಢ್ಯ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಕರ್ನಾಟಕದಿಂದ ಮೈಸೂರು ಮತ್ತು ಮಂಗಳೂರು ವಿವಿ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಹಗಲು ಮತ್ತು ರಾತ್ರಿ ಪಂದ್ಯಾವಳಿಗಳು ನಡೆಯಲಿದ್ದು, ಕ್ರೀಡಾಪಟುಗಳು, ತಂಡದ ವ್ಯವಸ್ಥಾಪಕರು, ರೆಫ್ರಿಗಳಿಗೆ ಸುಸಜ್ಜಿತ ಉಚಿತ ವಸತಿ, ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸೌರಬ್ ನಂದಲ್, ಅಮಾನ್, ಜಾಕೀರ್ ಸಹಿತ ಹಲವು ಮಂದಿ ಪ್ರಸಿದ್ಧ ಪ್ರೊ ಕಬಡ್ಡಿ ಆಟಗಾರರು ಈ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿ ಸಲಿರುವರು. ಹೈ ಸ್ಟಾಂಡರ್ಡ್ ಇಂಡೋರ್ ಕಬಡ್ಡಿ ಅಂಕಣಗಳನ್ನು ಇತ್ತೀಚಿನ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನ.23ರಂದು ಬೆಳಿಗ್ಗೆ 7 ಗಂಟೆಗೆ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಭೂಮಿಪೂಜೆ ನೆರವೇರಿಸುವ ಮೂಲಕ ಕ್ರೀಡಾ ಪಂದ್ಯಾವಳಿಗೆ ಚಾಲನೆ ನೀಡಲಿರುವರು. ಉದ್ಘಾಟನಾ ಸಮಾರಂಭವು ಬೆಳಗ್ಗೆ 10 ಗಂಟೆಗೆ ಮಂಗಳೂರು ವಿವಿಯ ಉಪಕುಲಪತಿ ಡಾ.ಜಯರಾಜ್ ಅಮೀನ್ ಅಧ್ಯಕ್ಷತೆ ಯಲ್ಲಿ ನಡೆಯಲಿದೆ. ಕಬಡ್ಡಿ ಕ್ರೀಡೆಯಲ್ಲಿ ಅರ್ಜುನ್ ಪ್ರಶಸ್ತಿ ಪುರಸ್ಕೃತ ರಾಕೇಶ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿರುವರು.

ನ.25ರಂದು ಸಂಜೆ 6 ಗಂಟೆಗೆ ಪ್ರಜ್ಞಾ ಗೌರವ ಸಮಾರಂಭ ನಡೆಯಲಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ನ.26ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ., ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್., ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News