ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ; ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-01-27 13:33 GMT

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ವಿಚಾರವಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ‌. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ‌. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ. ಕಾಂಗ್ರೆಸ್ ಒಂದು ಕುಟುಂಬ, ಒಂದು ಪರಿವಾರ ಇದ್ದಂತೆ ಎಂದರು.

ನಾನು ಕೂಡ ತಳಮಟ್ಟದಿಂದ ಬೆಳೆದು ಇಂದು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. 2013ರ ವಿಧಾನಸಭೆ, 2014ರ ಲೋಕಸಭಾ ಚುನಾವಣೆಯಲ್ಲಿ ಸೋತರೂ ಎದೆಗುಂದದೆ 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ನನ್ನನ್ನು 52 ಸಾವಿರ ಮತಗಳಿಂದ ಗೆಲ್ಲಿಸಿದರು. 2023ರಲ್ಲಿ 56 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರು. ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಾವು ಸೋತಿರಬಹುದು. ಎದೆಗುಂದದೆ ಎಲ್ಲರೂ ಒಗ್ಗೂಡಿ ಪಕ್ಷ ಕಟ್ಟಬೇಕಾಗಿದೆ ಎಂದು ಸಚಿವರು ಕಾರ್ಯಕರ್ತರಿಗೆ ಕರೆ ನೀಡಿದರು.

ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ದೀಪಕ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

"ನಾನು ಉಡುಪಿ ಜಿಲ್ಲೆಗೆ ಇದುವರೆಗೂ 19 ಬಾರಿ ಭೇಟಿ ನೀಡಿರುವೆ. ಮುಂದಿನ ಭೇಟಿ ವೇಳೆ ಒಂದು ಗಂಟೆ ಕಾರ್ಯಕರ್ತರ ಭೇಟಿಗೆ ಮೀಸಲಿಡುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು"

- ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರು






Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News