ಪರಿಷತ್ ಚುನಾವಣೆ | ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ
ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಇಂದು(ಮೇ.16) ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಮ್ಮ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ.ಶಂಕರ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬಳಿಕ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಕೆ.ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿತ್ತು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ್ದ ರಘುಪತಿ ಭಟ್, ನಾಯಕರ ಮನವಿ ಮೇರೆಗೆ ಮತ್ತೆ ಪಕ್ಷದಲ್ಲಿ ಮುಂದುವರೆದು ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲೂ ಟಿಕೆಟ್ ಸಿಗದ ಕಾರಣ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.