ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೈಹಿಕ ಶಿಕ್ಷಕರ ಕ್ರೀಡಾಕೂಟ

ಉಡುಪಿ:ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಅರೋಗ್ಯ ದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಸಹಕಾರಿಯಾಗುತ್ತದೆ. ಕ್ರೀಡೆಯಿಂದ ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಭಿಪ್ರಾಯಪಟ್ಟಿದ್ದಾರೆ.
ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಗಳ ಸಹಕಾರದೊಂದಿಗೆ ಗುರುವಾರ ನಡೆದ 2023-24ನೇ ಸಾಲಿನ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೈಹಿಕ ಶಿಕ್ಷಕರ ಕ್ರೀಡಾಕೂಟ ನಡೆಯುತ್ತಿದೆ. ಕ್ರೀಡಾಕೂಟಗಳು ದೈಹಿಕ ಶಿಕ್ಷಕರಿಗೆ ಹೊಸದೇನಲ್ಲ. ಅವರು ತಮ್ಮ ತಮ್ಮ ಶಾಲೆಗಳ ಮಕ್ಕಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆಯಲು ಅವಿರತ ಶ್ರಮ ವಹಿಸುತ್ತಿದ್ದಾರೆ. ಆದರೆ ಇಲ್ಲಿ ಅವರೇ ಕ್ರೀಡಾಕೂಟದಲ್ಲಿ ಭಾಗವಹಿಸುತಿದ್ದಾರೆ ಎಂದರು.
ದೈಹಿಕ ಶಿಕ್ಷಕರು ಕ್ರೀಡಾಕೂಟದಲ್ಲಿ ಸ್ಪರ್ಧಾ ಸ್ಫೂರ್ತಿಯಿಂದ ಭಾಗವಹಿಸ ಬೇಕು. ಸೋಲು-ಗೆಲುವು ಆಟದ ನಿಯಮವಷ್ಟೇ ಆಗಿದ್ದು, ಪ್ರಶಸ್ತಿ, ಸೋಲು-ಗೆಲುವುಗಳ ಬಗ್ಗೆ ಗಮನಹರಿಸದೆ ಸ್ಪರ್ಧಾತ್ಮಕ ಮನೋಭಾವದಿಂದ ಪ್ರತಿಯೊಬ್ಬ ಶಿಕ್ಷಕರೂ ಇದರಲ್ಲಿ ಭಾಗವಹಿಸುವಂತೆ ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವುದರೊಂದಿಗೆ ಉತ್ತಮ ಆರೋಗ್ಯ ಹೊಂದಿ ಪ್ರತಿದಿನ ಕ್ರಿಯಾಶೀಲರಾಗಿ ಇರಲು ಸಾಧ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದರು.
ಮಕ್ಕಳನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ದೈಹಿಕ ಶಿಕ್ಷಕರು ಇಂದು ಕ್ರೀಡಾಪಟುಗಳಾಗಿ ಭಾಗವಹಿಸುತ್ತಿದ್ದಾರೆ ಎಂದ ಅವರು ಜಿಲ್ಲೆಯ ದೈಹಿಕ ಶಿಕ್ಷಕರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡು ವಂತಾಗಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಹಲವಾರು ಕ್ರೀಡಾ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿರುವ ದೈಹಿಕ ಶಿಕ್ಷಕರು ಕೆಲವು ಕ್ರೀಡೆಗಳಲ್ಲಿ ಪರಿಣಿತಿಯನ್ನೂ ಹೊಂದಿರುತ್ತಾರೆ. ಇಂತಹ ಶಿಕ್ಷಕರುಗಳು ಇಂದು ತಾವೇ ಸ್ಪರ್ಧಿಗಳಾಗಿ ಭಾಗವಹಿಸುತ್ತಿರುವುದರಿಂದ ಸ್ಪರ್ಧೆಗಳು ಜಿದ್ದಾ ಜಿದ್ದಿನಿಂದ ಕೂಡಿರುವುದರಲ್ಲಿ ಸಂದೇಹವೇ ಇಲ್ಲ ಎಂದರು.
ಅಂತಾರಾಷ್ಟ್ರೀಯ ಕ್ರೀಡಾಪಟು ನಿತ್ಯಾನಂದ ಶೆಟ್ಟಿ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಡಿಡಿಪಿಐ ಗಣಪತಿ, ಉಡುಪಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ಐದು ವಲಯಗಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿ ಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅಧಿಕಾರಿಗಳು, ಜಿಲ್ಲೆಯ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರೆ, ಸತೀಶ್‌ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕೊನೆಯಲ್ಲಿ ವಂದಿಸಿದರು.
