ಹಿರಿಯ ನಾಗರಿಕರ ದಿನಾಚರಣೆಗೆ ಪೂರ್ವಭಾವಿ ಸಭೆ

Update: 2024-08-30 15:26 GMT

ಉಡುಪಿ, ಆ.30: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲು ಎಲ್ಲಾ ರೀತಿಯ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ. ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 1ರಂದು ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರ ವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗು ವುದು ಎಂದರು.

ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡಾ ಸ್ಪರ್ಧೆಗಳು ಸೆಪ್ಟೆಂಬರ್ 4ರಂದು ನಗರದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಹಿರಿಯ ನಾಗರಿಕರ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಶಿಷ್ಟಾಚಾರದಂತೆ ಅಹ್ವಾನ ಪತ್ರಿಕೆಯನ್ನು ಮುದ್ರಿಸಿ ಜನ ಪ್ರತಿನಿಧಿ ಹಾಗೂ ಗಣ್ಯರಿಗೆ ನೀಡಿ ಆಹ್ವಾನಿಸಬೇಕು ಎಂದ ಅವರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾಮಟ್ಟದ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ ಹಾಗೂ ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆ ಗಳನ್ನು ಆಯೋಜಿಸಿದ್ದು, ಮಹಿಳೆಯರ 60ರಿಂದ 70 ವರ್ಷ ವಯೋಮಾನದ ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಹಾಗೂ 60ರಿಂದ 69 ವರ್ಷ ವಯೋಮಾನದ ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಪುರುಷ ಹಿರಿಯ ನಾಗರಿಕರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳಿಗೆ ಪ್ರಯಾಣವೆಚ್ಚ, ವಸತಿ, ಊಟ ಮತ್ತು ಉಪಾಹಾರದ ವ್ಯವಸ್ಥೆಯನ್ನು ಇಲಾಖೆಯ ವತಿಯಿಂದ ಕಲ್ಪಿಸಲಾಗುವುದು ಎಂದರು.

ಕ್ರೀಡಾ ವಿಭಾಗದಲ್ಲಿ 3 ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ 2 ಸೇರಿದಂತೆ ಒಟ್ಟು ಐದು ಸ್ಪರ್ಧೆಗಳು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 60 ರಿಂದ 69 ವರ್ಷ ಮತ್ತು 70 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಗಾಯನ ಸ್ಪರ್ಧೆ ಹಾಗೂ ಏಕಪಾತ್ರಭಿನಯ ಸ್ಪರ್ಧೆಗಳು ನಡೆಯಲಿವೆ ಎಂದರು.

ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ‘ನಮ್ಮ ಹಿರಿಯರು ನಮ್ಮ ಆದರ್ಶ’ ಎಂಬ ಶೀರ್ಷಿಕೆಯಡಿ ಹಿರಿಯರ ಮೌಲ್ಯಗಳು, ತತ್ವ ಸಿದ್ಧಾಂತಗಳು, ಸತ್ಯ ನ್ಯಾಯ ನೀತಿ, ಸಂಸ್ಕಾರ, ಹಿರಿಯ ರನ್ನು ನಿರ್ಲಕ್ಷಿಸದೇ ವೃದ್ಧಾಶ್ರಮಗಳಿಗೆ ಕಳುಹಿಸದೇ ಅವರ ಲಾಲನೆ, ಪಾಲನೆ, ಸಂರಕ್ಷಣೆ ಕಾಯ್ದೆ ಕುರಿತು ವಾಕ್‌ ಚಾತುರ್ಯ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ವಾರ್ತಾಧಿಕಾರಿ ಮಂಜುನಾಥ್ ಬಿ, ಡಿಡಿಪಿಯು ಮಾರುತಿ, ಡಿಡಿಪಿಐ ಗಣಪತಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News