ನೇಮಕಗೊಂಡ ಶಿಕ್ಷಕರಿಗೆ ಸಿಂಧುತ್ವ ಪ್ರಮಾಣ ಪತ್ರ ಶೀಘ್ರ ನೀಡಿ: ಇಲಾಖಾ ಅಧಿಕಾರಿಗಳಿಗೆ ಎಂ.ಟಿ.ರೇಜು ಸೂಚನೆ

Update: 2023-11-02 15:59 GMT

ಉಡುಪಿ, ನ.2: ಶಿಕ್ಷಣ ಇಲಾಖೆಯಲ್ಲಿ ಹೊಸದಾಗಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅವರುಗಳಿಗೆ ಕರ್ತ ವ್ಯಕ್ಕೆ ಹಾಜರಾಗಲು ದಾಖಲೆಗಳ ಪರಿಶೀಲನಾ ಪ್ರಕ್ರಿಯೆ ವಿಳಂಬದಿಂದಾಗಿ ನೇಮಕಗೊಳ್ಳಲು ಸಾಧ್ಯವಾಗಿಲ್ಲ. ಅವರಿಗೆ ಸಿಂಧುತ್ವ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಇಲಾಖೆಗಳು ಶೀಘ್ರದಲ್ಲಿಯೇ ನಿಯಮಾನುಸಾರ ನೀಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಶಾಲಾ ಕಟ್ಟಡಗಳ ದುರಸ್ಥಿ ಕಾರ್ಯಗಳನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣ ಗೊಳಿಸುವಂತೆಯೂ ಅವರು ನಿರ್ದೇಶನ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರದ ವತಿಯಿಂದ ನೀಡಲಾಗುವ 5 ಕೆ.ಜಿ ಅಕ್ಕಿ ವಿತರಣೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ಹೊಸದಾಗಿ ರೇಷನ್ ಕಾರ್ಡ್‌ಗಳನ್ನು ಪಡೆದ ಹೆಚ್ಚಿನ ಜನರಿಗೆ ಅಕ್ಕಿ ವಿತರಣೆ ಆಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿವೆ. ಇವುಗಳಲ್ಲಿ ಅರ್ಹರಿದ್ದು, ಇದರ ಪ್ರಯೋಜನದಿಂದ ವಂಚಿತರಾಗುವ ಸಾಧ್ಯತೆ ಇದೆ. ಇವರುಗಳಿಗೆ ಅಕ್ಕಿ ವಿತರಣೆ ಆಗುವಂತೆ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಸೆಪ್ಟಂಬರ್ ತಿಂಗಳ ಅಂತ್ಯಕ್ಕೆ 2,13,658, ಫಲಾನುಭವಿಗಳು ನೋಂದಣಿ ಮಾಡಿ ಕೊಂಡಿದ್ದು, 1,77,910 ಫಲಾನುಭವಿಗಳಿಗೆ ಹಣವನ್ನು ಅವರುಗಳ ಬ್ಯಾಂಕ್ ಖಾತೆಗೆ ಜಮಾ ಮಾಡಿ ಶೇ.88ರಷ್ಟು ಸಾಧನೆ ಮಾಡಲಾಗಿತ್ತು. ಅಕ್ಟೋಬರ್ ತಿಂಗಳಲ್ಲಿ ಶೇ.85ರಷ್ಟು ಪ್ರಗತಿ ಸಾಧಿಸಲಾಗಿದೆ. ಆದರೆ 30,000ಕ್ಕೂ ಹೆಚ್ಚು ಜನರಿಗೆ ಈ ಯೋಜನೆ ತಲುಪಿಲ್ಲ. ತಾಂತ್ರಿಕ ನೂನ್ಯತೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಆಗಿರುವ ಸಮಸ್ಯೆ ಗಳನ್ನು ಇತ್ಯರ್ಥಪಡಿಸಲು ಮುಂದಾಗಬೇಕು ಎಂದರು.

ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ 2016-17, 2018-19ನೇ ಸಾಲಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸರಕಾರದಿಂದ ಅನುದಾನ ಬಿಡುಗಡೆ ಯಾಗಿದ್ದರೂ ಅವುಗಳ ಅನುಷ್ಠಾನ ಈವರೆಗೆ ಆಗಿಲ್ಲ. ಈ ರೀತಿ ಆದಲ್ಲಿ ಮುಂದಿನ ದಿನಗಳಲ್ಲಿ ಸರಕಾರ ಹೊಸ ಅನುದಾನ ಬಿಡುಗಡೆ ಮಾಡುವ ಸಾಧ್ಯತೆಗಳು ಕಡಿಮೆ ಇರುತ್ತದೆ. ಅಧಿಕಾರಿಗಳು ಕಾಮಗಾರಿಗಳ ಅನುಷ್ಠಾನ ಗಳನ್ನು ಪೂರ್ಣಗೊಳಿಸಲು ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಅವುಗಳನ್ನು ಬಗೆಹರಿಸಿ, ಆದ್ಯತೆಯ ಮೇಲೆ ಕಾಮಗಾರಿ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.

ಕೃಷಿ ಹಾಗೂ ತೋಟಗಾರಿಕೆಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ನೀಡಿರುವ ಗುರಿ ಹಾಗೂ ಸಾಧನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಒಂದೊಮ್ಮೆ ಅನುಷ್ಠಾನಗೊಳಿಸಲು ಫಲಾನುಭವಿಗಳ ಕೊರತೆ ಇದ್ದಲ್ಲಿ, ಅದನ್ನು ಇತರೆ ಜಿಲ್ಲೆಗಳಿಗೆ ವರ್ಗಾಯಿಸಬೇಕು ಎಂದರು.

ಗಂಗಾಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ವಿಳಂಬವಾಗುತ್ತಿರುವುದು ಕಂಡು ಬರುತ್ತಿದೆ. ದೇವರಾಜ ಅರಸು, ಅಂಬೇಡ್ಕರ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ, ಪ್ರತಿಶತ ನೂರರಷ್ಟು ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳ ಬೇಕು ಎಂದರು.

ಸಸ್ಯ ಶ್ಯಾಮಲಾ ಯೋಜನೆಯಡಿ ಶಾಲಾ-ಕಾಲೇಜುಗಳಲ್ಲಿ ಮರ -ಗಿಡ ಗಳನ್ನು ನೆಡುವ ಕಾರ್ಯವನ್ನು ಸಾಮಾಜಿಕ ಅರಣ್ಯ ಇಲಾಖೆಯವರು ಅನುಷ್ಠಾನಗೊಳಿಸಬೇಕು.ಕಳೆದ 2019-20ರಿಂದ ಈವರೆಗೆ ನೆಟ್ಟಿರುವ ಗಿಡ-ಮರಗಳ ದಾಖಲೆ ಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕು. ಶಾಲೆಗಳಿಗೆ ಭೇಟಿ ನೀಡಿದಾಗ 5 ವರ್ಷ, 3 ವರ್ಷ ಹಾಗೂ 2 ವರ್ಷಗಳ ಗಿಡ ಮರಗಳನ್ನು ಪರಿಶೀಲಿಸಲಾಗುವುದು ಎಂದರು.

ಅನುದಾನ ಸಮರ್ಪಕ ಬಳಕೆ:ಸರಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿ ಗಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಪೂರ್ಣ ಪ್ರಮಾಣದಲ್ಲಿ ಬಳಸಿ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕ್ರಿಯಾ ಯೋಜನೆ ರೂಪಿಸಿ ಜಿಲ್ಲೆಗೆ ನೀಡಿರುವ ಗುರಿ ಮತ್ತು ಸಾಧನೆಗಳನ್ನು ನಿಗದಿತ ಕಾಲಾವಧಿಯೊಳಗೆ ಸಮರ್ಪಕವಾಗಿ ಅನು ಷ್ಠಾನಗೊಳಿಸಿ. ಇದರ ಲಾಭ ಜನಸಾಮಾನ್ಯರಿಗೆ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News