ಡೆಂಗಿ ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ: ಉಡುಪಿ ಜಿಲ್ಲಾಧಿಕಾರಿ

Update: 2023-09-06 14:34 GMT

ಉಡುಪಿ, ಸೆ.6: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗಿ ರೋಗವನ್ನು ತಡೆಗಟ್ಟಲು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಕುರಿತು ವ್ಯಾಪಕವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗಿ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಡೆಂಗಿ ಕೇವಲ ಜ್ವರ ಅಲ್ಲ. ಅದು ಸೋಂಕು ಹೊಂದಿದ ಈಡೀಸ್ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ. ನಿಂತ ನೀರಿನಲ್ಲಿ ಈ ಸೊಳ್ಳೆಗಳ ಸಂತಾನೋತ್ಪತ್ತಿಯಾಗುತ್ತವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸುವುದರೊಂದಿಗೆ ಸೊಳ್ಳೆ ಕಚ್ಚುವುದರಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾ ರೋಗ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಡೆಂಗಿ ಹರಡುವ ಕುರಿತು ಹಾಗೂ ಅವುಗಳ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಎಂ. ಜಿ. ರಾಮ, ಕ್ಷಯರೋಗ ನಿಯಂತ್ರಣಧಿಕಾರಿ ಡಾ. ಚಿದಾನಂದ್, ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್, ಕೆಎಂಸಿಯ ಕಮ್ಯುನಿಟಿ ಮೆಡಿಸಿನ್‌ನ ಡಾ.ಅಶ್ವಿನಿ ಕುಮಾರ್, ಜಿಲ್ಲಾ ಎಂಟಮೊಲೋಜಿಸ್ಟ್ ಮುಕ್ತಾ ಮತ್ತು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News