ಹಬ್ಬ, ಉತ್ಸವಗಳನ್ನು ಗುರಿಯಾಗಿಸಿ ನಡೆದ ದುಷ್ಕೃತ್ಯ ಪ್ರಕರಣಗಳನ್ನು ಎನ್ಐಎ ತನಿಖೆಗೆ ಒಪ್ಪಿಸಿ: ಆರ್.ಅಶೋಕ್ ಒತ್ತಾಯ

Update: 2024-09-16 06:44 GMT

ಬೆಂಗಳೂರು: ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ದುಷ್ಕೃತ್ಯಗಳು ನಡೆಸುತ್ತಿರುವುದರ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಇದನ್ನು ಭೇದಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನು NIA ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಹಾಕಿರುವ ಅವರು, "ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು 'ಪಾಕಿಸ್ತಾನ ಝಿಂದಾಬಾದ್' ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮು ದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಫೆಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ. ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು' ಎಂದು ಆರೋಪಿಸಿದ್ದಾರೆ.

'ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತಾರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಭೇದಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ NIA ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಗೃಹ ಸಚಿವ ಹಾಗು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ' ಎಂದು ಆರ್.ಅಶೋಕ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News