ಮಂದಗತಿಯಲ್ಲಿ ರಾ.ಹೆದ್ದಾರಿ ಕಾಮಗಾರಿ; ಉಡುಪಿ ಡಿಸಿ ಅಸಮಾಧಾನ

Update: 2024-12-13 14:09 GMT

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ತೀರಾ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ ಶೀಘ್ರದಲ್ಲಿ ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ೬೬, ೧೬೯ ಹಾಗೂ ೧೬೯ಎಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳು, ಅಸಮರ್ಪಕ ದಾರಿದೀಪ ನಿರ್ವಹಣೆ, ಚರಂಡಿಗಳ ನಿರ್ಮಾಣ, ಪಾದಚಾರಿ ಮಾರ್ಗದಲ್ಲಿ ಇಂಗು ಗುಂಡಿಗಳು ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಚರ್ಚಿಸುವ ಸಲುವಾಗಿ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗದಲ್ಲಿ ಕುಂಠಿತ ಕಂಡುಬಂದಿದೆ. ಇದರಿಂದ ಸಾರ್ವಜನಿಕರಿಗೆ, ವಾಹನಗಳ ಸಂಚಾರಕ್ಕೆ ತೀವ್ರ ಅನಾನುಕೂಲ ಹಾಗೂ ಅಡಚಣೆ ಉಂಟಾಗುತ್ತಿವೆ. ಎಲ್ಲಾ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ಶೀಘ್ರವೇ ಎಲ್ಲವನ್ನೂ ಪೂರ್ಣಗೊಳಿಸಲು ಮುಂದಾಗ ಬೇಕು ಎಂದು ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಕಾರ್ಯವು ತುಂಬಾ ವಿಳಂಬವಾ ಗುತ್ತಿದೆ. ಭೂಮಿಯ ಮಾಲಕರುಗಳಿಗೆ ವೈಜ್ಞಾನಿಕವಾಗಿ ಪರಿಹಾರದ ಮೊತ್ತವನ್ನು ಆದ್ಯತೆಯ ಮೇಲೆ ನೀಡಿ. ಭೂಮಿಯನ್ನು ಸ್ವಾಧೀನಪಡಿಸಿ ಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬದಿಂದಾಗಿ ಕಾಮಗಾರಿಯನ್ನು ಕೈಗೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರಕಾರದ ಉನ್ನತ ಮಟ್ಟದ ಅಧಿಕಾರಿ ಗಳು ಪ್ರತೀ ಹದಿನೈದು ದಿನಗಳಿಗೊಮ್ಮೆ ಸಭೆ ಕರೆದು ಆಗಿರುವ ಪ್ರಗತಿ, ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಕೇಳುತ್ತಿರುತ್ತಾರೆ. ಆದರೆ, ಸ್ವಾಧೀನ ಪ್ರಕ್ರಿಯೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಅವರು, ಮುಂದಿನ ಹತ್ತು ದಿನಗಳ ಒಳಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ರೈಲ್ವೆ ಮೇಲ್ಸೇತುವೆ ಎಲ್ಲಿ?: ರಾಷ್ಟ್ರೀಯ ಹೆದ್ದಾರಿ ೧೬೯ರಲ್ಲಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾರ್ಯಕ್ಕೆ ನಿರ್ಮಾಣ ಮಾಡುತ್ತಿರುವ ಕಬ್ಬಿಣದ ಗರ್ಡರ್ಸ್‌ನ ಕಾರ್ಯವೂ ಮಂದಗತಿಯಲ್ಲಿ ಸಾಗಿದೆ. ಈ ಹಿಂದೆ ಡಿಸೆಂಬರ್ ೨೫ರ ಒಳಗೆ ಅದನ್ನು ಅಳವಡಿಸುವುದಾಗಿ ಸಭೆಗೆ ತಿಳಿಸಲಾಗಿತ್ತು. ಆದರೆ, ಈ ಕಾರ್ಯವು ಒಪ್ಪಿಕೊಂಡ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವೇ ಇಲ್ಲ ಎಂಬುದು ಈಗ ಖಚಿತವಾಗಿ ಕಂಡುಬರುತ್ತಿದೆ ಎಂದವರು ಅಸಮಧಾನ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಭಿಯಂತರರು ಹಾಗೂ ರೈಲ್ವೇ ಇಲಾಖೆಯ ಅಭಿಯಂತರರು ಒಬ್ಬರ ಮೇಲೊಬ್ಬರು ದೂರು ಹೇಳಿಕೊಂಡು ಹೋಗುತ್ತಿರುವುದು ಸರಿಯಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಲು ಎರಡೂ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಂತೆಕಟ್ಟೆ ಅಂಡರ್‌ಪಾಸ್: ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿಯನ್ನು ಮಾರ್ಚ್ ತಿಂಗಳ ಒಳಗೆ ಸಂಪೂರ್ಣವಾಗಿ ಮುಗಿಸಬೇಕು ಎಂದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಕಾಮಗಾರಿಗಳನ್ನು ಸಹ ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಡಾ.ಅರುಣ್ ಕೆ, ಡಿಎಫ್‌ಓ ಗಣಪತಿ, ವೈಲ್ಡ್‌ಲೈಫ್ ಡಿಎಫ್‌ಓ ಶಿವರಾಮ ಎಂ ಬಾಬು, ಸಹಾಯಕ ಕಮಿಷನರ್ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಶೃಂಗೇರಿ- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News