ಸಾರ್ವಜನಿಕರ ಅರ್ಜಿ ತ್ವರಿತ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಉಡುಪಿ, ಜು.18:ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಅವುಗಳನ್ನು ನಿಯಮಾನುಸಾರ, ಪಾರದರ್ಶಕವಾಗಿ, ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ನೂತನ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಎಲ್ಲಾ ಸರಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿ ಉಪಸ್ಥಿತರಿದ್ದು, ಕಾಲಮಿತಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವುಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕ ರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಈಗಾಗಲೇ ಡೀಮ್ಡ್ ಫಾರೆಸ್ಟ್‌ನಿಂದ ವಿನಾಯಿತಿಗೊಂಡ ಜಮೀನುಗಳನ್ನು ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇ ಮಾಡುವ ಮೂಲಕ ಅರಣ್ಯದಿಂದ ಬೇರ್ಪಡಿಸಿ, ಸಾರ್ವಜನಿಕ ಉಪಯೋಗಿ ಸರಕಾರಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಮತ್ತಿತರ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಡೀಮ್ಡ್ ಪಾರೆಸ್ಟ್‌ನಿಂದ ವಿನಾಯಿತಿ ಪಡೆದ ಜಾಗಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆ ನೀರು ಇಂಗಿಸುವ ಕಾಮಗಾರಿ: ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿತ್ತು. ಉತ್ತಮ ಮಳೆಯಿಂದಾಗಿ ಸದ್ಯ ಸಮಸ್ಯೆ ನಿವಾರಣೆಯಾಗಿದೆ. ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತ ರಾಗಬೇಕು. ಮಳೆ ನೀರನ್ನು ಇಂಗಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗಿದೆ. ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಭಿತ್ತನೆ ಬೀಜ ಲಭ್ಯವಿರುವಂತೆ ನೋಡಿಕೊಳ್ಳಬೇಕು. ರಸಗೊಬ್ಬರದ ದಾಸ್ತಾನು ಸಾಕಷ್ಟು ಇಟ್ಟುಕೊಳ್ಳುವು ದರೊಂದಿಗೆ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಅವುಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಪರಿಸರದಲ್ಲಿ ಹೆಚ್ಚಿನ ತೇವಾಂಶದಿಂದ ಅಡಿಕೆ ಬೆಳೆಯಲ್ಲಿ ಕಂಡುಬರುವ ಕೊಳೆರೋಗ ಹಾಗೂ ಹಳದಿ ಎಲೆ ಚುಕ್ಕಿರೋಗ ಗಳಿಗೆ ಅಗತ್ಯ ಔಷದೋಪಚಾರಗಳನ್ನು ವಿತರಿಸಬೇಕು ಎಂದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಬಿಡುಗಡೆಯಾದ ಅನುದಾನವು ವಾಪಾಸು ಹೋಗದಂತೆ ಎಚ್ಚರ ವಹಿಸಿ ಪ್ರತಿಶತ 100ರಷ್ಟು ಅನುಷ್ಠಾನಗೊಳಿಸುವ ಕಾರ್ಯವನ್ನು ಅನುಷ್ಠಾನಾಧಿಕಾರಿಗಳು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಅಕ್ರಮ ಗಣಿಗಾರಿಕೆ ತಡೆಗೆ ಕ್ರಮ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಿಆರ್‌ಝಡ್ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಿ ಎಂದರು.
ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿ ಸೇರಿದಂತೆ ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿರುವಅಪಾಯಕಾರಿ ಮರಗಳನ್ನು ಗುರುತಿಸಿ, ಅವುಗಳನ್ನು ತೆರವು ಗೊಳಿಸಲು ಮುಂದಾಗಬೇಕು. ಪ್ರಸ್ತುತ ಸಾಲಿನಲ್ಲಿ ಗಿಡಮರಗಳನ್ನು ಬೆಳಸಲು ನಿಗದಿಪಡಿಸಿರುವ ಗುರಿಯನ್ನು ಸಾಧಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.
ನಿರಂತರ ವಿದ್ಯುತ್ ಸಂಪರ್ಕ: ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತಕ್ಕೊಳಗಾದಲ್ಲಿ ಕೂಡಲೇ ಮರು ಸಂಪರ್ಕ ಕಲ್ಪಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದ ಅವರು, ವಿದ್ಯುತ್ ಮಾರ್ಗಗಳಿಗೆ ಅಡಚಣೆ ಉಂಟು ಮಾಡುವ ಮರದ ಕೊಂಬೆಗಳನ್ನು ತೆರವುಗೊ ಳಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 27ಕ್ಕೂ ಅಧಿಕ ಅಂಗನವಾಡಿ ಕಟ್ಟಡಗಳಿಗೆ ಜಾಗದ ಕೊರತೆ ಯಿಂದ ಸ್ವಂತ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ. ಸ್ಥಳೀಯವಾಗಿ ದಾನಿಗಳನ್ನು ಸಂಪರ್ಕಿಸಿ, ಅವರಿಂದ ಅಗತ್ಯ ಜಾಗವನ್ನು ಪಡೆದು ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಚೆಕ್ ಡ್ಯಾಂಗಳ ನಿರ್ವಹಣೆ ಸೂಕ್ತ ರೀತಿಯಲ್ಲಿ ಆಗದ ಕಾರಣ ನೀರು ಸರಾಗವಾಗಿ ಹರಿದು ಹೋಗದೇ ತಗ್ಗು ಪ್ರದೇಶಗಳಿಗೆ ನುಗ್ಗಿ ಕೃತಕ ನೆರೆ ಉಂಟಾ ಗುತ್ತಿದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳುವಂತೆ ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುವ ಬಗ್ಗೆ ಎಚ್ಚರ ವಹಿಸಿ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕು. ಗೋವಾದ ಮೂಲಕ ಜಿಲ್ಲೆಗೆ ಅಕ್ರಮ ಮದ್ಯ ಸರಬರಾಜು ಆಗದಂತೆ ನೋಡಿಕೊಂಡಾಗ ಮಾತ್ರ ಅಬಕಾರಿ ಆದಾಯವನ್ನು ಹೆಚ್ಚಿಸಲು ಸಾಧ್ಯ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.